'ನನಗೆ ಏನೂ ಆಗಲ್ಲ ಹೆದರಬೇಡಿ' ಬಂಧನದ ಬಳಿಕ ನಟ ದರ್ಶನ್ ಮೊದಲ ರಿಯಾಕ್ಷನ್

drshan
Published on

ಬೆಂಗಳೂರು:  ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟಿ ಪವಿತ್ರಾ ಗೌಡ, ದರ್ಶನ್​ ಸೇರಿದಂತೆ 19 ಮಂದಿ ಜೈಲು ಪಾಲಾಗಿದ್ದಾರೆ. ಇವರ ಜೊತೆ ಇನ್ನೂ ಕೆಲವು ಸಹಚರರು ಕೂಡ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸತತ 12 ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ದರ್ಶನ್ ಅವರನ್ನ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್‌ 13 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನಟ ದರ್ಶನ್‌ ಅವರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬಳಿಕ ಪೊಲೀಸ್ ವ್ಯಾನ್​ನಲ್ಲಿ ಪರಪ್ಪನ ಅಗ್ರಹಾರಕ್ಕೆ ಪ್ರಯಾಣ ನಡೆಸಿದರು. ಈ ವೇಳೆ ದರ್ಶನ್ ಅವರು ಪೊಲೀಸ್ ವ್ಯಾನ್​ನಲ್ಲೇ ಮೊದಲ ಬಾರಿಗೆ ತಮ್ಮ ಅಭಿಮಾನಿಗಳತ್ತ ಕೈ ಬೀಸಿ ಮಾತನಾಡಿದ್ದಾರೆ.

ಪೊಲೀಸ್ ವ್ಯಾನ್​ನಲ್ಲಿ ಕೈ ಬೀಸಿ ಮಾತನಾಡಿದ ದರ್ಶನ್ ಅವರು ನನಗೆ ಏನು ಆಗುವುದಿಲ್ಲ.  ಪೊಲೀಸ್ ವ್ಯಾನ್​ ಹೊರಗೆ ನೆರೆದಿದ್ದ ಅಭಿಮಾನಿಗಳತ್ತ ಕೈಬೀಸಿದ ದರ್ಶನ್ ಅವರು ತಮ್ಮ ಎಂದಿನ ಶೈಲಿನಲ್ಲಿ ಪ್ಲೈಯಿಂಗ್ ಕಿಸ್‌ ಕೊಟ್ಟು ನಾನು ಆರಾಮಾಗಿದ್ದೇನೆ. ನನಗೆ ಏನೂ ಆಗಲ್ಲ ಹೆದರಬೇಡಿ ಎಂದಿದ್ದಾರೆ.

ನಟ ದರ್ಶನ್ ಅವರು ಕೊಲೆ ಕೇಸ್‌ನಲ್ಲಿ ಬಂಧನವಾದ ಬಳಿಕ ಅವರ ಅಭಿಮಾನಿಗಳು ಆತಂಕಕ್ಕೀಡಾಗಿದ್ದಾರೆ. ಬಂಧನದ ಬಳಿಕ ದಾಸ ದರ್ಶನ್ ಮೊದಲ ಬಾರಿಗೆ ಫ್ಯಾನ್ಸ್‌ಗೆ ಮೊದಲ ಸಂದೇಶ ನೀಡಿದ್ದಾರೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಪೊಲೀಸ್ ವ್ಯಾನ್​ನಲ್ಲಿ ನಟ ದರ್ಶನ್ ಅವರು ಪ್ರತಿಕ್ರಿಯೆ ನೀಡಿರೋ ವಿಡಿಯೋ ಸಖತ್ ವೈರಲ್ ಆಗಿದೆ.

ಏನಿದು ಪ್ರಕರಣ?: ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ. ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ. ವಿಚಾರಣೆ ನಡೆಸಿದ ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಮಹತ್ವದ ಆದೇಶ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net