

ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು, ನಾಳೆ ಕರಾವಳಿ ಭಾಗದಲ್ಲಿ ಹಲವು ಪ್ರದೇಶಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ಇಲಾಖೆಯ ಮಾಹಿತಿಯಂತೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರ ಇದ್ದು, ಸಂಜೆ ಅಥವಾ ರಾತ್ರಿ ವೇಳೆ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ ಅಲ್ಲದೆ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುವ ಸಂಭವ ಇದೆ. ನಿನ್ನೆ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಕೊಡಗು ಜಿಲ್ಲೆಯ ಮಡಿಕೇರಿ, ಭಾಗಮಂಡಲದಲ್ಲಿ ತಲಾ 2 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣ, ಮಾಣಿ, ಪಣಂಬೂರು,ಸುಬ್ರಹ್ಮಣ್ಯ, ಮೂಲ್ಕಿ, ಮಂಗಳೂರು, ಬೆಳ್ತಂಗಡಿ, ಉಡುಪಿ ಜಿಲ್ಲೆಯ ಕಾರ್ಕಳ, ಕುಂದಾಪುರ, ಕೋಟ, ಸಿದ್ದಾಪುರ ಹಾಗೂ ಉತ್ತರ ಕನ್ನಡ ಜಿಲ್ಲೆಯ ಮಂಕಿ, ಅಂಕೋಲಾ, ಗೇರುಸೊಪ್ಪದಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ.
ರಾಜ್ಯದ ಕೆಲವು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆ ಸುರಿಯುವ ಸಾಧ್ಯತೆ ಇದೆ. ಇನ್ನು ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ.