ಕಬ್ಬಿಣದ ಅದಿರಿಗೆ ಸರಾಸರಿ ದರ ನಿಗದಿ ಮಾಡಿ: - ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

highcourt
Published on

ಬೆಂಗಳೂರು: ಪ್ರತಿ ದರ್ಜೆಯ ಕಬ್ಬಿಣದ ಅದಿರಿಗೆ ಸರಾಸರಿ ಮಾರಾಟ ದರ ನಿಗದಿಪಡಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಈ ವಿಚಾರವಾಗಿ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನಲ್ಲಿ ಗಣಿ ಗುತ್ತಿಗೆ ಹೊಂದಿರುವ ಬಿಕೆಜಿ ಮೈನಿಂಗ್ ಪ್ರೈವೇಟ್ ಲಿಮಿಟೆಡ್ ಹಾಗೂ ಮೆಸರ್ಸ್ ನದೀಮ್ ಮಿನಿರಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಗಳು ಸಲ್ಲಿಸಿದ್ದ ಪ್ರತ್ಯೇಕ ತಕರಾರು ಅರ್ಜಿಗಳು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಹಾಗೂ ನ್ಯಾಯಮೂರ್ತಿ ವಿ. ಶ್ರೀಷಾನಂದ ಅವರಿದ್ದ ರಜಾ ಕಾಲದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿದ್ದವು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಕೇಂದ್ರ ಗಣಿ ಸಚಿವಾಲಯ, ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕೈಗಾರಿಕಾ ಇಲಾಖೆ, ಇಂಡಿಯನ್ ಬ್ಯೂರೋ ಆಫ್ ಮೈನ್ಸ್, ಪ್ರಾದೇಶಿಕ ಗಣಿ ನಿಯಂತ್ರಕರಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶನ ನೀಡಿ ವಿಚಾರಣೆಯನ್ನು 2025ರ ಜ.9ಕ್ಕೆ ಮುಂದೂಡಿತು. ಅರ್ಜಿದಾರರ ಪರ ಹಿರಿಯ ವಕೀಲ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net