ಶೀಘ್ರದಲ್ಲಿಯೇ ಎಲ್ಲಾ ಸಂಸ್ಥೆಗಳಲ್ಲೂ ಕನ್ನಡ ಬಾವುಟ ಹಾರಾಟ ಕಡ್ಡಾಯ: DK ಶಿವಕುಮಾರ್

dk (84)
Published on

ಬೆಂಗಳೂರು: ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆ (ಸರ್ಕಾರಿ ಹಾಗೂ ಖಾಸಗಿ) ಗಳಲ್ಲಿ ಕನ್ನಡ ಧ್ವಜಾರೋಹಣ ಮಾಡುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗುವುದು ಎಂದು ಡಿಸಿಎಂ DK ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದ ಆವರಣದಲ್ಲಿ ನೂತನವಾಗಿ ಪ್ರತಿಷ್ಟಾಪಿಸಿರುವ ಭುವನೇಶ್ವರಿಯ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ನಮ್ಮ ಮಾತೃಭಾಷೆ, ಈ ನೆಲ, ಜಲ ಕಾಪಾಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ.

ಬೆಂಗಳೂರಿನಲ್ಲಿ 107 ಭಾಷೆ ಮಾತನಾಡುವ ಜನರಿದ್ದಾರೆ. ಕಳೆದ ವರ್ಷ ಎಲ್ಲಾ ಸಂಘ ಸಂಸ್ಥೆಗಳಲ್ಲೂ ನವೆಂಬರ್ 1 ರಂದು ಸರ್ಕಾರ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕನ್ನಡದ ಧ್ವಜ ಹಾರಿಸುವಂತೆ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದೆ. ನಾನು ಸಂಪೂರ್ಣವಾಗಿ ಯಶಸ್ವಿಯಾಗಿಲ್ಲ, ಆದರೆ ಮುಂದಿನ ದಿನಗಳಲ್ಲಿ ಇದನ್ನು ಕಡ್ಡಾಯ ಮಾಡುವ ಆದೇಶವನ್ನು ಹೊರಡಿಸಲಾಗುವುದು.

ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಅಥವಾ ಪಾಲಿಕೆ ವತಿಯಿಂದ ಎಲ್ಲಾ ಸಂಸ್ಥೆಗಳಿಗೂ ಕನ್ನಡ ಬಾವುಟ ಪೂರೈಸುವ ಕೆಲಸ ಮಾಡುತ್ತೇವೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕನ್ನಡರಾಜ್ಯೋತ್ಸವದ ದಿನದಂದು ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವಂತೆ ಸೂಚಿಸಲಾಗುವುದು. ಆಮೂಲಕ ಸಣ್ಣ ವಯಸ್ಸಿನಿಂದಲೇ ಮಕ್ಕಳಲ್ಲಿ ಕನ್ನಡದ ವೈಭವವನ್ನು ಬಿತ್ತುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಮಕ್ಕಳಿಗೆ ಶಾಲೆಗಳಲ್ಲಿ ಕನ್ನಡವನ್ನು ದ್ವಿತೀಯ ಭಾಷೆಯಾಗಿಯಾದರೂ ವ್ಯಾಸಂಗ ಮಾಡಬೇಕು. ಇಲ್ಲದಿದ್ದರೆ ಮಕ್ಕಳು ಕನ್ನಡ ಕಲಿಯಲು ಕಷ್ಟಪಡುತ್ತಾರೆ. ಈ ನಿಟ್ಟಿನಲ್ಲಿ ನಾವು ಒಟ್ಟಾಗಿ ಕನ್ನಡವನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು. ನಾವು ಯಾವುದಕ್ಕೂ ಜಗ್ಗದೆ ನೆಲ, ಜಲ, ಭಾಷೆ ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ. ಈ ಕಾರ್ಯವನ್ನು ಕೇವಲ ಸರ್ಕಾರ ಮಾತ್ರ ಮಾಡುತ್ತಿದೆ ಎಂದು ಹೇಳುವುದಿಲ್ಲ. ಕನ್ನಡ ಸಂಘ ಸಂಸ್ಥೆಗಳು ಈ ಭಾಷೆ ಉಳಿಯಲು ಹೋರಾಟ ಮಾಡುತ್ತಿದ್ದೀರಿ. ನಾವು ಅಧಿಕಾರದ ಆಸೆಗೆ ಹೋರಾಟ ಮಾಡಿದರೆ, ನೀವುಗಳು ಯಾವುದನ್ನು ನಿರೀಕ್ಷೆ ಮಾಡದೇ ಭಾಷೆ ಉಳಿವಿಗೆ ಶ್ರಮಿಸುತ್ತಿದ್ದೀರಿ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net