

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಡೆಂಘೆ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸದರಿ ಪ್ರಕರಣಗಳನ್ನು ನಿಯಂತ್ರಿಸುವ ಎಲ್ಲ 198 ವಾರ್ಡ್‌ಗಳಲ್ಲಿಯೂ ಸೊಳ್ಳೆ ನಿಯಂತ್ರಣ ಕಾರ್ಯಕ್ರಮದ ಅರಿವು ಮೂಡಿಸುವ ಹಾಗೂ ಔಷಧಿ ಸಿಂಪಡಣೆ ಕಾರ್ಯಕ್ರಮವನ್ನು ತೀವ್ರಗೊಳಿಸಲಾಗಿದೆ.
ನಗರದಲ್ಲಿ ತೀವ್ರತರವಾದ ಸೊಳ್ಳೆ ನಿಯಂತ್ರಣ ಕಾರ್ಯವನ್ನು ಮುಂದಿನ ಆದೇಶದವರೆಗೆ ಮುಂದುವರೆಸಲಾಗುತ್ತದೆ. ಜತೆಗೆ ಡೆಂಘೆ ಕುರಿತಂತೆ ಶಾಲಾ-ಕಾಲೇಜುಗಳಿಂದ ಜಾಥಾ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗುತ್ತಿದೆ.
ಪ್ರಸ್ತುತ ನೀರು ನಿಂತ ಸ್ಥಳಗಳಲ್ಲಿ ಮತ್ತು ಮೋರಿಗಳಿಗೆ ಔಷಧಿ ಸಿಂಪಡಣೆ ಕಾರ್ಯ ಮಾಡಲಾಗುತ್ತಿದೆ. ಪಾಲಿಕೆಯ ಕಸದ ವಾಹನಗಳಲ್ಲಿಯೂ ಸಹ ಧ್ವನಿವರ್ಧಕಗಳ ಮೂಲಕ ಡೆಂಘೆ ಕುರಿತು ಅರಿವು ಮೂಡಿಸುವ ಪ್ರಚಾರ ಕಾರ್ಯ ಕೈಗೊಳ್ಳಲಾಗುತ್ತಿದೆ
ಪ್ರಕರಣಗಳ ಪತ್ತೆಗೆ ಸಮೀಕ್ಷೆ:
ಕೊಳಚೆ ಹಾಗೂ ಇನ್ನಿತರೇ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ನಮ್ಮ ಕ್ಲಿನಿಕ್ ವೈದ್ಯರ ತಂಡ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಮತ್ತು ಸಿಬ್ಬಂದಿಗಳ ತಂಡಗಳನ್ನು ರಚಿಸಿಕೊಂಡು ಆಯಾ ಪ್ರದೇಶಗಳಲ್ಲಿ ಡೆಂಘೆ ಪ್ರಕರಣಗಳ ಪತ್ತೆ ಹಚ್ಚುವ ಸಮೀಕ್ಷೆ ನಡೆಸಲಾಗುತ್ತಿದೆ. ಇದರ ಮೇಲ್ವಿಚಾರಣೆಯನ್ನು ಸಂಬಂಧಪಟ್ಟ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೆ ಎಂದು ಪಾಲಿಕೆಯ ಸಾರ್ವಜನಿಕ ಆರೋಗ್ಯ ವಿಭಾಗದ ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ತಿಳಿಸಿದ್ದಾರೆ.