ಸರ್ಕಾರ ವಜಾಗೊಳಿಸಲು ಪಟ್ಟು

klr bjp protest
ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವರ್ತನೆಯನ್ನು ಖಂಡಿಸಿ ಕೋಲಾರದಲ್ಲಿ ರಸ್ತೆ ತಡೆದು ಬಿಜೆಪಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
Published on

ಕೋಲಾರ: ರಾಜ್ಯಪಾಲರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು, ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ವಿರುದ್ಧ, ನಗರದ ಬಸ್ ನಿಲ್ದಾಣದ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಬಸ್ ನಿಲ್ದಾಣದ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ರಸ್ತೆ ತಡೆದು ರಾಜ್ಯ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರ ವಿರುದ್ಧ ಘೋಷಣೆ ಕೂಗಿ, ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯ ನಂತರ ಜಿಲ್ಲಾಽಕಾರಿ ಅಕ್ರಂ ಪಾಷಾ ಅವರಿಗೆ ಮನವಿ ಸಲ್ಲಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲ್ ಮಾತನಾಡಿ, ಜನರ ಸಮಸ್ಯೆಗಳನ್ನು ಬಗೆಹರಿಸಿ ಎಂದರೆ ಕಾಂಗ್ರೆಸ್ ಸರ್ಕಾರವು ರಾಜ್ಯಪಾಲರ ವಿರುದ್ಧವೇ ದ್ವೇಷ ಸಾಧಿಸಲು ಹೊರಟಿದೆ, ತಪ್ಪುಗಳನ್ನು ಪ್ರಶ್ನೆ ಮಾಡಿದರೆ ಕಾಂಗ್ರೆಸ್‌ಗೆ ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಕಿಡಿಕಾರಿದರು.
ಹಿಂದೆ ಬಿಜೆಪಿ ಸರ್ಕಾರದಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭದಲ್ಲಿ ಅವರ ವಿರುದ್ಧವೂ ರಾಜ್ಯಪಾಲರು ತನಿಖೆಗೆ ಆದೇಶ ಹೊರಡಿಸಿದ್ದರು. ಈಗಲೂ ಮಾಡಲಾಗಿದೆ. ಮುಡಾದಲ್ಲಿ 14 ನಿವೇಶನ ಸಿಎಂ ಪತ್ನಿಗೆ ನೀಡಿರುವುದು ಸೇರಿ ನಾನಾ ಆರೋಪಗಳಿಗೆ ಸಂಬಂಧಿಸಿದ ತನಿಖೆಗೆ ಸ್ಪಂದಿಸಬೇಕಿರುವುದು ಸಿದ್ದರಾಮಯ್ಯರ ಕರ್ತವ್ಯ ಎಂದರು.
ರಾಜ್ಯಪಾಲರನ್ನು ಓಡಿಸುವುದಾಗಿ ಐವನ್ ಡಿಸೋಜ ಹೇಳಿಕೆ ನೀಡಿದ್ದಾರೆ. ಸಚಿವ ಕೃಷ್ಣಬೈರೇಗೌಡ, ಮಾಲೂರು ಶಾಸಕ ಕೆ.ವೈ.ನಂಜೇಗೌಡರು ಸಹ ಅವಾಚ್ಯ ಶಬ್ದಗಳನ್ನು ಬಳಸಿದ್ದು, ರಾಜ್ಯಪಾಲರ ವಿರುದ್ಧ ಮಾತನಾಡಿರುವವರ ವಿರುದ್ಧ ಈ ಕೂಡಲೇ ಜಾತಿ ನಿಂದನೆ ಪ್ರಕರಣ ದಾಖಲಿಸಿ ಗೂಂಡಾ ಕಾಯಿದೆಯಡಿ ಬಂಧಿಸಬೇಕು ಎಂದು ಒತ್ತಾಯಿಸಿದರು.
ಮಾಜಿ ಶಾಸಕ ವೈ.ಸಂಪಂಗಿ ಮಾತನಾಡಿ, ದೇಶದಲ್ಲಿ ದಲಿತರು ಸಾಂವಿಧಾನಿಕ ಹುದ್ದೆಗಳಲ್ಲಿದ್ದಾಗ ಕಾಂಗ್ರೆಸ್ ದುರ್ವರ್ತನೆ ಮೊದಲಿನಿಂದಲೂ ಮಾಡಿಕೊಂಡು ಬರುತ್ತಿದ್ದಾರೆ. ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ವಿಚಾರವಾಗಿ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುವುದನ್ನು ಬಿಟ್ಟು ದಲಿತ ಸಮುದಾಯದ ರಾಜ್ಯಪಾಲರಿಗೆ ಬೆದರಿಕೆ ಹಾಕಿ ಬೇರೆ ರಾಜ್ಯ, ರಾಷ್ಟದ ರಾಜಕೀಯವನ್ನು ಕರ್ನಾಟಕದಲ್ಲಿ ನಡೆಸಲು ಮುಂದಾಗಿರುವುದು ಖಂಡನೀಯ ಎಂದು ಆಕ್ರೋಶವ್ಯಕ್ತಪಡಿಸಿದರು.
ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಸಿಎಂ ರಾಜೀನಾಮೆ ನೀಡಿ ಸರ್ಕಾರ ವಜಾಗೊಳ್ಳುವವರೆಗೂ ಮುಂದುವರೆಸುತ್ತೇವೆ. ಒಂದು ವೇಳೆ ಜಿಲ್ಲೆಯ ಬಿಜೆಪಿಯವರಿಗೆ ತೊಂದರೆ ಆದರೆ ಕಾಂಗ್ರೆಸ್ ಪಕ್ಷ, ಸಿಎಂ ನೇರ ಹೊಣೆ ಎಂದು ಎಚ್ಚರಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಮಾತನಾಡಿ, ರಾಜ್ಯ ಸರ್ಕಾರ ಹಾಗೂ ಸಿಎಂ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದ್ದು, ಸಿಎಂ ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯ ಪ್ರವೀಣ್‌ಗೌಡ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ವಿ.ಮಹೇಶ್, ಕೆಂಬೋಡಿ ನಾರಾಯಣಸ್ವಾಮಿ, ರಾಜೇಶ್ ಸಿಂಗ್, ಅರುಣಮ್ಮ, ಮಮತಮ್ಮ, ತಿಮ್ಮರಾಯಪ್ಪ, ಬಾಬು, ಸುರೇಶ್, ಓಹಿಲೇಶ್ ಮತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net