

Delhi: ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಇಂದು (ಸೋಮವಾರ ಅ 13) ಭೇಟಿ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಮುಂಚಿತವಾಗಿ ದೀಪಾವಳಿ ಹಬ್ಬದ ಶುಭಾಶಯವನ್ನು ಕೋರಿದ್ದಾರೆ.
ಈ ವಿಷಯವನ್ನು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿರುವ ಮಾಜಿ ಸಿಎಂ ಬಿಎಸ್ವೈ, ನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಅವಕಾಶ ಸಿಕ್ಕಿದ್ದು ಗೌರವ. ಇದೇ ಸಂದರ್ಭದಲ್ಲಿ ಪ್ರಧಾನಿಗಳಿಗೆ ದೀಪಾವಳಿ ಹಬ್ಬದ ಶುಭಾಶಯ ಕೋರಲಾಯಿತು ಎಂದು ಬರೆದುಕೊಂಡಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟಗೊಂಡ ಹಿನ್ನಲೆಯಲ್ಲಿ, ನಿನ್ನೆ(ಭಾನುವಾರ ಅ 12) ನವದೆಹಲಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ಜೆ.ಪಿ.ನಡ್ಡಾ ನೇತೃತ್ವದಲ್ಲಿ ನಡೆದ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸಭೆಯಲ್ಲಿ ಚುನಾವಣಾ ಸಮಿತಿ ಸದಸ್ಯರಾಗಿ ಭಾಗವಹಿಸಿದ್ದ ಬಿಎಸ್ವೈ, ಟಿಕೆಟ್ ಹಂಚಿಕೆಯ ಕುರಿತು ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ. ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಹಿರಿಯ ನಾಯಕರ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ನೂತನವಾಗಿ ಭಾರತದ ಉಪರಾಷ್ಟ್ರಪತಿಗಳಾಗಿ ಆಯ್ಕೆಯಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಮತ್ತು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯ ಕೋರಿದರು.