ನಾಲ್ವರು ವಾಹನ ಕಳ್ಳರ ಬಂಧನ

arrested
Published on

ಬೆಂಗಳೂರು: ದಕ್ಷಿಣ ಮತ್ತು ಉತ್ತರ ವಿಭಾಗದ ಪೊಲೀಸರು ಮೂರು ಪ್ರತ್ಯೇಕ ಬೈಕ್ ಕಳವು ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮನೆ ಮುಂಭಾಗ ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಜೆ.ಪಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕರಿಸಂದ್ರ ನಿವಾಸಿಗಳಾದ ಶೇಖ್ ಮುಜಾಮಿಲ್ ಪಾಷಾ(25) ಮತ್ತು ಮೊಹಮ್ಮದ್ ಫಯಾಜ್(2) ಬಂಧಿತರು. ಆರೋಪಿಗಳಿಂದ 4 ಲಕ್ಷ ರೂ. ಮೌಲ್ಯದ 7 ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ಮೋಜಿನ ಜೀವನಕ್ಕಾಗಿ ಮನೆ ಮುಂದೆ ನಿಲುಗಡೆ ಮಾಡಿದ್ದ ಬೈಕ್‌ಗಳ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡಿ, ಬೇರೆಡೆ ಮಾರಾಟ ಮಾಡುತ್ತಿದ್ದರು. ಇತ್ತೀಚೆಗೆ ಠಾಣೆ ವ್ಯಾಪ್ತಿಯಲ್ಲಿ ಬೈಕ್‌ವೊಂದನ್ನು ಕದ್ದಿದ್ದರು. ಈ ಮಾಹಿತಿ ಮೇರೆಗೆ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಜೆ.ಪಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
4 ಲಕ್ಷ ರೂ. ಮೌಲ್ಯದ ಬೈಕ್‌ಗಳು ಜಪ್ತಿ
ಹೋಟೆಲ್ ಮಂದೆ ನಿಲುಗಡೆ ಮಾಡಿದ್ದ ಬೈಕ್‌ಗಳ ಕಳವು ಮಾಡುತ್ತಿದ್ದ ಇಲಿಯಾಜ್ ನಗರದ ನಿವಾಸಿ ಸಾದೀಕ್ (23) ಎಂಬಾತನನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತನಿಂದ 4 ಲಕ್ಷ ರೂ. ಮೌಲ್ಯದ 7 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಇತ್ತೀಚೆಗೆ ಠಾಣೆ ವ್ಯಾಪ್ತಿಯ ಹೋಟೆಲ್ ಮುಂಭಾಗ ನಿಲುಗಡೆ ಮಾಡಿದ್ದ ಬೈಕ್ ಕಳವು ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕದ್ದ ಬೈಕ್‌ನಲ್ಲಿ ಗುಜರಿ ವಸ್ತುಗಳ ಕಳವು
ಇನ್ನೊಂದು ಪ್ರಕರಣದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳ ಕಳವು ಮಾಡಿ, ಗುಜರಿ ವಸ್ತುಗಳ ಕಳವು ಮಾಡುತ್ತಿದ್ದ ಆರೋಪಿಯನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಮೂಲದ ತಿಲಕ್(30) ಬಂಧಿತ. ಆರೋಪಿಯಿಂದ 8 ಲಕ್ಷ ರೂ. ಮೌಲ್ಯದ 7 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
ಈತ ಠಾಣೆ ವ್ಯಾಪ್ತಿಯಲ್ಲಿರುವ ಮನೆ ಮುಂಭಾಗ ನಿಲುಗಡೆ ಮಾಡಿದ್ದ ಬೈಕ್ ಕಳವು ಮಾಡಿ, ಅದರಲ್ಲಿ ವಿವಿಧ ಪ್ರದೇಶಗಳಲ್ಲಿ ಸುತ್ತಾಡಿ ಗುಜರಿ ವಸ್ತುಗಳನ್ನು ಕಳವು ಮಾಡುತ್ತಿದ್ದ. ಇದರೊಂದಿಗೆ ಸಮೀಪದ ಹೋಟೆಲ್‌ವೊಂದರಲ್ಲಿ ಕೆಲಸ ಮಾಡಿಕೊಂಡು, ಅಲ್ಲಿಯೇ ವಾಸವಾಗಿದ್ದ. ಈತನ ಬಂಧನದಿಂದ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ದ್ವಿಚಕ್ರ ವಾಹನ ಕಳವು ಪ್ರಕರಣಗಳು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net