

ಮಂಗಳೂರು: ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆಗೆ ಕಳೆದ ಎರಡು ದಿನಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಯೋಜನೆಗೆ ಚಾಲನೆ (ಜೂ.11) ಸಿಕ್ಕಿದ ದಿನವೇ 5,71,023 ಮಹಿಳೆಯರು ಉಚಿತ ಪ್ರಯಾಣದ ಲಾಭ ಪಡೆದುಕೊಂಡಿದ್ದರು.
ಇದೀಗ ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಇರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಪ್ರಸಿದ್ಧ ತೀರ್ಥ ಕ್ಷೇತ್ರಗಳಲ್ಲಿ ಭಕ್ತರ ದಟ್ಟಣೆ ಹೆಚ್ಚಿದೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ದೇವರ ದರ್ಶನ ಪಡೆಯುತ್ತಿದ್ದಾರೆ.
ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ಸಾಮಾನ್ಯವಾಗಿ ವಾರಾಂತ್ಯದಲ್ಲಿ ಭಕ್ತರ ಸಂಖ್ಯೆ ಹೆಚ್ಚಿತ್ತು. ಆದರೆ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಇದೀಗ ವಾರದ ನಡುವೆಯೂ ಭಕ್ತರ ದಟ್ಟಣೆ ಹೆಚ್ಚಿದೆ. ಬೆಂಗಳೂರು, ಕೋಲಾರ, ಚಿತ್ರದುರ್ಗ, ತುಮಕೂರು, ಉತ್ತರ ಕರ್ನಾಟಕ ಭಾಗದಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಕರಾವಳಿಯ ಪುಣ್ಯ ಕ್ಷೇತ್ರಗಳಿಗೆ ಆಗಮಿಸುತ್ತಿದ್ದಾರೆ.
ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆಗೆ ಜೂ.11 ರಂದು ಚಾಲನೆ ಸಿಕ್ಕಿದೆ. ಮೊದಲ ದಿನ 5,71,023 ಮಹಿಳೆಯರು ಉಚಿತ ಪ್ರಯಾಣದ ಲಾಭ ಪಡೆದುಕೊಂಡಿದ್ದಾರೆ.
ರಾಜ್ಯದ ಎಲ್ಲ ಮಹಿಳೆಯರು ಶಕ್ತಿ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗಿದ್ದು, ಪ್ರತಿನಿತ್ಯ 41.81 ಲಕ್ಷ ಮಹಿಳೆಯರು (11.58 ಲಕ್ಷ ಪಾಸ್ ಪ್ರಯಾಣಿಕರು ಸೇರಿ) ಲಾಭ ಪಡೆಯಲಿದ್ದಾರೆ ಎಂದು ಅಂದಾಜಿಸಲಾಗಿದೆ. ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ ಈ ಯೋಜನೆ ಅನ್ವಯವಾಗಲಿದ್ದು, ರಾಜ್ಯದ 6,308 ನಗರ, 5,958 ಸಾಮಾನ್ಯ ಹಾಗೂ 6,443 ವೇಗದೂತ ಸೇರಿದಂತೆ ಒಟ್ಟು 18,609 ಬಸ್‌ಗಳಲ್ಲಿ ಪ್ರಯಾಣಿಸಬಹುದು.