

ಚಿತ್ರದುರ್ಗ: ರಾಜ್ಯವ್ಯಾಪಿ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭಗೊಂಡಿದ್ದು, ಮೊದಲ ದಿನದ ಮೊದಲ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಆಯಾ ಜಿಲ್ಲೆಯ ಡಿಸಿ, ಶಿಕ್ಷಕರ ವರ್ಗ ಮತ್ತು ಪೋಷಕರು ಶುಭ ಹಾರೈಸಿದ್ದಾರೆ.
ಚಿತ್ರದುರ್ಗದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಶುಕ್ರವಾರ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಮಕ್ಕಳಿಗೆ ಗುಲಾಬಿ ಹೂ ಹಾಗೂ ಸಿಹಿ ನೀಡಿ ಸ್ವಾಗತಿಸಿ, ಶುಭ ಹಾರೈಸಿದರು.
ಈ ಮೂಲಕ ಪರೀಕ್ಷೆಗೆ ವಿನೂತನವಾಗಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡ ಹಿರಿಯ ಅಧಿಕಾರಿಗಳು, ಪರೀಕ್ಷೆಯನ್ನು ಚೆನ್ನಾಗಿ ಬರೆದು, ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಬೇಕು ಎಂದು ಶುಭಕೋರಿದರು. ಡಿಡಿಪಿಐ ಎಂ.ಆರ್. ಮಂಜುನಾಥ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ನಾಗಭೂಷಣ್, ನಗರಸಭೆ ಪೌರಾಯುಕ್ತೆ ಎಂ. ರೇಣುಕಾ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-1 ಮಾ.21ರಿಂದ ಏ.4ರವರೆಗೆ ನಡೆಯಲಿದೆ. ಈ ಸಂಬಂಧ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಲ್ಲ ರೀತಿಯ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಂಡಿದೆ. ಎಸ್‌ಎಸ್‌ಎಲ್‌ಸಿಗೆ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ 15,881 ಶಾಲೆಗಳ 8,42,817 ವಿದ್ಯಾರ್ಥಿಗಳು, 38,091 ಪುನರಾವರ್ತಿತ ಮತ್ತು 15,539 ಖಾಸಗಿ ಸೇರಿ 8,96,447 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಇದರಲ್ಲಿ 3,35,468 ಬಾಲಕರು, 3,78,389 ಬಾಲಕಿಯರು ಮತ್ತು 5 ತೃತೀಯ ಲಿಂಗಿಗಳು ಇದ್ದಾರೆ. 2,818 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿಗೆ 2,818 ಸ್ಥಾನಿಕ, ಜಿಲ್ಲಾ ಹಂತದಲ್ಲಿ 410, ತಾಲ್ಲೂಕು ಹಂತದಲ್ಲಿ 1,662 ವಿಚಕ್ಷಣ ದಳವನ್ನು ಪರೀಕ್ಷಾ ಭದ್ರತೆ ದೃಷ್ಟಿಯಿಂದ ನೇಮಿಸಲಾಗಿದೆ.