ಇನ್ನುಂದೆ ಎಲ್ಲಾ ಇಲಾಖೆಗಳಲ್ಲೂ ಪೂರ್ಣ ಪ್ರಮಾಣದಲ್ಲಿ ಕನ್ನಡ ಬಳಸಬೇಕು; ರಾಜ್ಯ ಸರ್ಕಾರ ಆದೇಶ | Kannada

vidhanasoudha
Published on

ಬೆಂಗಳೂರು: ಸದ್ಯದ ಪರಿಸ್ಥಿತಿಯಲ್ಲಿ ಪರಭಾಷೆ ವ್ಯಾಮೋಹದಿಂದ ಕನ್ನಡವನ್ನು ನಿರ್ಲಕ್ಷಿಸಲಾಗುತ್ತಿದೆ. ಹಾಗಾಗಿ ಕನ್ನಡದ ಕಂಪನ್ನು ಉಳಿಸಿಕೊಂಡು, ಬೆಳೆಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳಲ್ಲೂ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ರಾಜ್ಯ ಸರ್ಕಾರ ಮತ್ತೊಂದು ಸುತ್ತೋಲೆ ಹೊರಡಿಸಿದೆ.

ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಇಂದು (ಜೂನ್ 25) ಈ ಮಹತ್ವದ ಸುತ್ತೋಲೆ ಹೊರಡಿಸಿದ್ದು ಆಡಳಿತದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಿದ್ದಾರೆ. ಒಂದು ವೇಳೆ ಸೂಚನೆಗಳನ್ನ ಉಲ್ಲಂಘಿಸಿದರೆ ಅಂತವರ ವಿರುದ್ಧ ವೈಯಕ್ತಿಕವಾಗಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಅಂಗಡಿ ಮುಂಗಟ್ಟುಗಳ ಬೋರ್ಡ್​ನಲ್ಲಿ ಶೇ 60ರಷ್ಟು ಕನ್ನಡ ಇರಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದು ಸರಿಯಾಗಿ ಅನುಷ್ಠಾನವಾಗಿಲ್ಲ. ಇದರ ನಡುವೆ ಇದೀಗ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಸುತ್ತೋಲೆ ಹೊರಡಿಸಿದೆ.

ಮುಖ್ಯಕಾರ್ಯದರ್ಶಿ ಸುತ್ತೋಲೆಯಲ್ಲೇನಿದೆ?

ಕನ್ನಡದಲ್ಲಿ ಬರುವ ಎಲ್ಲಾ ಅರ್ಜಿ, ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಕಚೇರಿಯ ನಾಮಪಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ವಿಧಾನಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನಸೆಳೆಯುವ ಸೂಚನೆಯನ್ನು ಕನ್ನಡದಲ್ಲಿಯೇ ಸಲ್ಲಿಸಬೇಕು. ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಇತರೆ ಎಲ್ಲಾ ಸರ್ಕಾರದ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸಲು ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸುತ್ತೋಲೆ ಹೊರಡಿಸಿದ್ದಾರೆ.

(ಏಜೆನ್ಸೀಸ್)

ಕಛೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ನಮೂನೆ, ದಾಖಲೆ ಪುಸ್ತಕ ಮುಂತಾದವುಗಳನ್ನು ಕನ್ನಡದಲ್ಲಿ ಭರ್ತಿ ಮಾಡಬೇಕು. ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿ ಕನ್ನಡದಲ್ಲಿಯೇ ಇರಬೇಕು. ಕೇಂದ್ರ ಸರ್ಕಾರ, ಹೊರ ರಾಜ್ಯಗಳು ಮತ್ತು ನ್ಯಾಯಾಲಯಗಳ ಪತ್ರ ವ್ಯವಹಾರಗಳನ್ನು ಹೊರತುಪಡಿಸಿ ಉಳಿದೆಲ್ಲಾ ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net