

ಬೆಂಗಳೂರು: ಉತ್ತರ ಕರ್ನಾಟಕದ ಎರಡು ಮುಖ್ಯ ರೈಲ್ವೆ ಯೋಜನೆಗಳಾದ ಗದಗ-ವಾಡಿ ಮತ್ತು ಬಾಗಲಕೋಟೆ-ಕುಡಚಿ ನಡುವಿನ ಮಾರ್ಗಗಳ ಪ್ರಗತಿ ಪರಿಶೀಲನೆ ಬಗ್ಗೆ ಪ್ರತ್ಯೇಕ ಸಭೆ ನಡೆಸಿದ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
257 ಕಿಲೋಮೀಟರ್ ಉದ್ದದ ಗದಗ- ವಾಡಿ ನಡುವಿನ ಮಾರ್ಗವನ್ನು 2026ರ ಮಾರ್ಚ್ ಒಳಗೆ ಮುಗಿಸುವ ಗಡುವು ಹಾಕಿಕೊಳ್ಳಲಾಗಿದೆ. ಒಟ್ಟು ರೂ. 1,922 ಕೋಟಿ ಅಂದಾಜು ವೆಚ್ಚದ ಈ ಯೋಜನೆಯು ರಾಜ್ಯ ಸರ್ಕಾರ ಮತ್ತು ರೈಲ್ವೆ ಇಲಾಖೆಗಳ ತಲಾ ಶೇಕಡಾ 50ರಷ್ಟು ವೆಚ್ಚ ಹಂಚಿಕೆಯಲ್ಲಿ ನಡೆಯುತ್ತಿದೆ ಎಂದು ಸಚಿವರು ಮಾಧ್ಯಮಗಳಿಗೆ ವಿವರಿಸಿದರು.
ಈ ಕಾಮಗಾರಿಗೆ 4,002 ಎಕರೆ ಭೂಮಿ ಅಗತ್ಯವಿದ್ದು, ಈಗಾಗಲೇ 3,945 ಎಕರೆ ಭೂಮಿಯನ್ನು ಕಾಮಗಾರಿಗಾಗಿ ಬಿಟ್ಟುಕೊಡಲಾಗಿದೆ. ಮಿಕ್ಕ 57 ಎಕರೆ ಭೂಮಿಯನ್ನು ಇನ್ನೊಂದು ತಿಂಗಳೊಳಗೆ ಕೊಡಲಾಗುತ್ತದೆ ಎಂದರು.
ಗದಗದಿಂದ ತಳಕಲ್ ವರೆಗೆ ಈಗಾಗಲೇ ರೈಲ್ವೆ ಹಳಿ ಇದೆ. ತಳಕಲ್ ನಿಂದ ಕುಷ್ಟಗಿವರೆಗಿನ 57 ಕಿ.ಮೀ. ಪೈಕಿ ಹನುಮಪುರದವರೆಗೆ ಕೆಲಸ ಮುಗಿದಿದೆ. ಕುಷ್ಟಗಿವರೆಗಿನ ಮಾರ್ಗ ಮಾರ್ಚ್ 24ರೊಳಗೆ ಮುಗಿಯಲಿದೆ. ಅದಾದ ಮೇಲೆ ಇಲ್ಲಿ ಪ್ರಾಯೋಗಿಕ ರೈಲು ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಹಾಜರಿದ್ದ ಶಾಸಕ ಬಸವರಾಜ ರಾಯರಡ್ಡಿ, ಗದಗ-ವಾಡಿ ರೈಲು ಮಾರ್ಗ ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಒತ್ತು ಕೊಡುವಂತೆ ಸಚಿವರನ್ನು ಇದೇ ವೇಳೆ ಕೋರಿದರು. ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ತಂಡಗಳನ್ನು ಕಳುಹಿಸಿ ಗುಣಮಟ್ಟ ಖಾತ್ರಿ ಗೊಳಿಸಿಕೊಳ್ಳುವಂತೆ ಸಚಿವರು ಇದೇ ವೇಳೆ ನಿರ್ದೇಶನ ನೀಡಿದರು.
ಮತ್ತೊಂದು ಯೋಜನೆಯಾದ, ಬಾಗಲಕೋಟೆ- ಕುಡಚಿ, 142 ಕೋಟಿ ಕಿ.ಮೀ. ಉದ್ದದ 1,530 ಕೋಟಿ ರೂ. ವೆಚ್ಚದ ಕಾಮಗಾರಿಗೆ ಬೇಕಾಗಿದ್ದ 2,496 ಎಕರೆ ಭೂಮಿಯ ಪೈಕಿ 2,476 ಎಕರೆ ಈಗಾಗಲೇ ಹಸ್ತಾಂತರವಾಗಿದೆ. ಉಳಿದ 20 ಎಕರೆ ಭೂಮಿಯನ್ನು ಸದ್ಯದಲ್ಲೇ ಬಿಟ್ಟುಕೊಡಲಾಗುವುದು. 2025ರ ಡಿಸೆಂಬರ್ ಒಳಗೆ ಈ ಕಾಮಗಾರಿ ಮುಗಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.
ಬಾಗಲಕೋಟೆ- ಖಚ್ಚಿದೋಣಿ- ಲೋಕಾಪುರದವರೆಗಿನ 60 ಕಿ.ಮೀ. ರೈಲ್ವೆ ಕಾಮಗಾರಿ 2024ರ ಮಾಚ್‌ರ್ ವೇಳೆಗೆ ಮುಗಿಯಲಿದೆ. ಆನಂತರ, ಈ ಭಾಗದಲ್ಲಿ ರೈಲು ಸಂಚಾರ ಆರಂಭವಾಗಲಿದೆ. ಮತ್ತೊಂದು ಕಡೆ ಕುಡಚಿ ಭಾಗದಿಂದ ಕಾಮಗಾರಿ ಆರಂಭಿಸಲು ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಕೆಲಸಗಳಿಗೆ ಚಾಲನೆ ಕೊಡಬೇಕಿದೆ. ಕುಡಚಿಯಿಂದ ಜಗದಾಳ ವರೆಗಿನ ಕೆಲಸ ಶುರುವಾಗಲಿದೆ ಎಂದರು.
ಕೊಪ್ಪಳ ಸಂಸದ ಕರಡಿ ಸಂಗಣ್ಣ, ಲಿಂಗಸಗೂರು ಶಾಸಕ ಮಾನಪ್ಪ ವಜ್ಜಲ್, ರೈಲ್ವೆ ಅಧಿಕಾರಿಗಳು, ಮೂಲಸೌಕರ್ಯ ಇಲಾಖೆ ಎಸಿಎಸ್ ಗೌರವ ಗುಪ್ತ, ಹಾಜರಿದ್ದರು. ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪಾಲ್ಗೊಂಡಿದ್ದರು.