ಗಾಂಧಿ ಜಯಂತಿಯಲ್ಲಿ ಸಿಎಂ ಸಿದ್ದರಾಮಯ್ಯ ಗ್ರಾಮಗಳನ್ನು ಸ್ವಾವಲಂಬಿಯಾಗಿಸಲು ಕ್ರಮ ಸರ್ವೋದಯ, ಅಂತ್ಯೋದಯ ಸರ್ಕಾರದ ಧ್ಯೇಯ

cm siddaramih
Published on

ಬೆಂಗಳೂರು:
ಗ್ರಾಮಗಳು ಸ್ವಾವಲಂಬಿಯಾಗಿರಬೇಕು ಎನ್ನುವುದು ಗಾಂಧೀಜಿ ಅವರ ಕನಸಾಗಿತ್ತು. ಈ ನಿಟ್ಟಿನಲ್ಲಿ ಸರ್ಕಾರ ತನ್ನ ಬದ್ಧತೆಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬಿಬಿಎಂಪಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಚತಾ ಆಂದೋಲನಾ ಪ್ರತಿಜ್ಞಾವಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಾತ್ಮಗಾಂಧಿ ಮೊದಲು ಇಡೀ ಗ್ರಾಮೀಣ ಭಾರತವನ್ನು ಸುತ್ತಾಡಿ ನಮ್ಮ ಜನರ ಬದುಕು ಮತ್ತು ಬವಣೆಯನ್ನು ಅರ್ಥ ಮಾಡಿಕೊಂಡು ಬಳಿಕ ಅದಕ್ಕೆ ತಕ್ಕಂತೆ ಸ್ವಾತಂತ್ರ್ಯ ಹೋರಾಟ ಸಂಘಟಿಸಿ ಸ್ವತಃ ಜೈಲು ಸೇರಿ ಹೋರಾಟ ಮುಂದುವರೆಸಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು ಎಂದರು.
ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿ 1947 ರಲ್ಲಿ ಬ್ರಿಟೀಷರು ಭಾರತದಿಂದ ತೊಲಗುವಂತೆ ಮಾಡಿದರು. ಸ್ವಾತಂತ್ರ್ಯ ಭಾರತದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯಗಳನ್ನು ಈಡೇರಿಸುವ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಕಾರ್ಯಕ್ರಮಗಳೂ ಕೂಡ ಬಡವರಿಗೆ ಆರ್ಥಿಕ ಸ್ವಾತಂತ್ರ್ಯ ಒದಗಿಸಿಕೊಡುವುದಾಗಿದೆ ಎಂದರು.

ಸರ್ಕಾರದ ಧ್ಯೇಯ:
ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ. ಗ್ರಾಮಗಳ ಉದ್ದಾರ ಆಗದೆ ದೇಶ ಉದ್ದಾರ ಆಗಲು ಸಾಧ್ಯವಿಲ್ಲ ಎಂದು ನಾವು ಗ್ರಾಮಗಳ ಪ್ರಗತಿಗೆ ಕಾರ್ಯಕ್ರಮ ರೂಪಿಸಿದ್ದೇವೆ ಎಂದರು.

ಆತ್ಮಸಾಕ್ಷಿ ನ್ಯಾಯಾಲಯ:
ಆತ್ಮ ಸಾಕ್ಷಿಯ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದದು. ಆದ್ದರಿಂದ ನಾವು ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದೇ ಗಾಂಧಿಯವರಿಗೆ ನಾವು ಸಲ್ಲಿಸುವ ದೊಡ್ಡ ಗೌರವ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಕೆ.ಪಾಟೀಲ್, ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲ್ಲಿ, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಾಸಕ ರಿಜ್ವಾನ್ ಅರ್ಷದ್, ಬಿಬಿಎಂಪಿ ಆಯುಕ್ತರಾದ ತುಷಾರ ಗಿರಿನಾಥ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲಾ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net