

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪ್ರಕರಣದಲ್ಲಿ 6ನೇ ಆರೋಪಿಯಾಗಿರುವ ಬೆಳಗಾವಿಯ ಭರತ್ ಜಯವಂತ್ ಕುರಾನೆ, 9ನೇ ಆರೋಪಿ ಮಹಾರಾಷ್ಟ್ರದ ಸತಾರದ ಸುಧನ್ವ ಗೊಂಧಾಲೇಕರ್, 13ನೇ ಆರೋಪಿ ಶಿವಮೊಗ್ಗದ ಶಿಕಾರಿಪುರದ ಸುಜಿತ್ ಕುಮಾರ್,16ನೇ ಆರೋಪಿ ಮಹಾರಾಷ್ಟ್ರದ ಔರಂಗಾಬಾದ್ ಶ್ರೀ ಕಾಂತ್ ಪಂಗಾರ್ಕರ್ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.
ಈ ಹಿಂದೆ ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಇದರೊಂದಿಗೆ 18 ಆರೋಪಿಗಳ ಪೈಕಿ 8 ಮಂದಿಗೆ ನ್ಯಾಯಾಲಯವು ಜಾಮೀನು ನೀಡಿದಂತಾಗಿದೆ.
ಎಲ್ಲ ಆರೋಪಿಗಳು ತಲಾ 1 ಲಕ್ಷ ರೂ. ಮೌಲ್ಯದ ವೈಯಕ್ತಿಕ ಬಾಂಡ್, ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ವಿಚಾರಣಾಧೀನ ನ್ಯಾಯಾಲಯ ವಿನಾಯಿತಿ ನೀಡದ ಹೊರತು ವಿಚಾರಣೆಯ ಎ್ಲ ದಿನ ಆರೋಪಿಗಳು ವಿಚಾರಣೆಗೆ ಹಾಜರಾಗಬೇಕು.
ಅರ್ಜಿದಾರರು ಪ್ರಾಸಿಕ್ಯೂಷನ್ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಪ್ರಕರಣ ಇತ್ಯರ್ಥವಾಗುವವರೆಗೆ ನ್ಯಾಯಾಲಯ ಅನುಮತಿಸದ ಹೊರತು ಅರ್ಜಿದಾರರು ವಿಚಾರಣಾಧೀನ ನ್ಯಾಯಾಲಯದ ವ್ಯಾಪ್ತಿ ತೊರೆಯುವಂತಿಲ್ಲ. ಈ ಪೈಕಿ ಯಾವುದೇ ಷರತ್ತು ಉಲ್ಲಂಘಿಸಿದರೂ ಪ್ರಾಸಿಕ್ಯೂಷನ್ ಜಾಮೀನು ರದ್ದತಿಗೆ ಕೋರಬಹುದು ಎಂದು ನ್ಯಾಯಾಲಯ ಹೇಳಿದೆ.