ಬಾಲ್ಯವಿವಾಹ ತಡೆ ಜಾಗೃತಿಗೆ ಸ್ಥಳೀಯ ಸಹಾಯ ಪಡೆಯಿರಿ

dc meeting
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಗುರುದತ್ತ ಹೆಗಡೆ ಸಭೆ ನಡೆಸಿದರು. ಡಾ. ನಟರಾಜ್, ಕೃಷ್ಣಪ್ಪ, ಡಾ. ಸಂತೋಷ್‌ಕುಮಾರ್ ಮುಂತಾದವರಿದ್ದರು.
Published on

ಶಿವಮೊಗ್ಗ: ಜಿಲ್ಲೆಯಲ್ಲಿ ಎಲ್ಲಿಯೇ ಬಾಲ್ಯವಿವಾಹ ಪ್ರಕರಣ ನಡೆದರೂ ಅದನ್ನು ಹಾಟ್‌ಸ್ಪಾಟ್ ಎಂದು ಪರಿಗಣಿಸಬೇಕು. ಕಾರಣರಾದ ಎಲ್ಲರ ವಿರುದ್ಧವೂ ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚಿಸಿದರು.

ಮಂಗಳವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು, ಸ್ಥಳೀಯ ಮುಖಂಡರು, ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳು ಮತ್ತು ಪ್ರಭಾವಿ ವ್ಯಕ್ತಿಗಳ ಸಹಾಯ ಪಡೆದು ಸಮುದಾಯದಲ್ಲಿ ಮತ್ತು ಪಾಲಕರಲ್ಲಿ ಬಾಲ್ಯ ವಿವಾಹದ ವಿರುದ್ಧ ಅರಿವು ಮೂಡಿಸಬೇಕು ಎಂದು ಹೇಳಿದರು.

ಬಾಲ್ಯವಿವಾಹ ತಡೆಯುವಲ್ಲಿ ಶ್ರಮಿಸಿದ ಮುಖಂಡರು, ಪ್ರೇರಕರನ್ನು ಗೌರವಿಸಬೇಕು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಬಾಲ್ಯವಿವಾಹ ತಡೆಯಲು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್ ಮಾತನಾಡಿ, ಜಿಲ್ಲೆಯಲ್ಲಿ 2024ರ ಏಪ್ರಿಲ್‌ನಿಂದ ಡಿಸೆಂಬರ್ ಅಂತ್ಯದವರೆಗೆ ಬಾಲ್ಯ ವಿವಾಹಕ್ಕೆ ಸಂಬಂಧಿಸಿ ಒಟ್ಟು 89 ದೂರುಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ 63 ನಡೆದಿದ್ದು, 26 ವಿವಾಹಗಳನ್ನು ತಡೆಯಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಬಾಲ್ಯ ವಿವಾಹ ತಡೆಯಲು ಪ್ರಾಥಮಿಕ, ಪ್ರೌಢ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ, ವಸತಿ ನಿಲಯಗಳಲ್ಲಿ ಮಕ್ಕಳ ಹಕ್ಕುಗಳು ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ, ವಿಶೇಷ ಗ್ರಾಮ ಸಭೆಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಶಿರೇಖಾ, ಜಿಪಂ ಉಪ ಕಾರ್ಯದರ್ಶಿ ಸುಜಾತಾ, ಡಿಎಚ್‌ಒ ಡಾ. ನಟರಾಜ್, ನಿರೂಪಣಾಧಿಕಾರಿ ಡಾ. ಸಂತೋಷ್‌ಕುಮಾರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ ಖಾನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net