

ಚಿಕ್ಕಮಗಳೂರು: ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇದರ ಕೀರ್ತಿ ಕಾರ್ಯಕರ್ತರು, ಮುಖಂಡರಿಗೆ ಸಲ್ಲುತ್ತದೆ. ಮುಂದಿನ ಚುನಾವಣೆಗಳಿಗೆ ಈಗಿನಿಂದಲೇ ಸಿದ್ಧರಾಗಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರದ ದುರಾಡಳಿತದಿಂದಾಗಿ ರಾಜ್ಯದ ಜನತೆ ರೋಸಿ ಹೋಗಿದ್ದರು. ಆ ವಾತಾವರಣದಿಂದ ಹೊರಬರಬೇಕು ಎಂದು ಬದಲಾವಣೆ ಬಯಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದರು.
ಸಚಿವ ಸಂಪುಟದಲ್ಲಿ ನನಗೆ ಜವಾಬ್ದಾರಿಯುತ ಖಾತೆ ನೀಡಿದ್ದಾರೆ. ಜನರಿಗೆ ತೊಂದರೆ ಆಗದಂತೆ ನಿಭಾಯಿಸುತ್ತೇನೆ. ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕು. ಅನೇಕ ಕಾರಣಗಳಿಂದ ನಾನಾ ರೀತಿಯ ಕಾಯಿಲೆಗಳು ಹರಡುತ್ತಿವೆ. ಮುಂಜಾಗ್ರತಾ ಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.
ಸರ್ಕಾರಿ ಆಸ್ಪತ್ರೆಗಳಿಗೆ ಬಡವರು ಹೆಚ್ಚಾಗಿ ಆಗಮಿಸುತ್ತಾರೆ. ಗುಣಮಟ್ಟದ ಚಿಕಿತ್ಸೆ ಕಲ್ಪಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಆಸ್ಪತ್ರೆಯಲ್ಲೂ ರೋಗಿಗಳಿಗೆ ಅಗತ್ಯವಿರುವ ಔಷಧಗಳು ಲಭ್ಯವಾಗಬೇಕು. ಕೊರತೆ ಎದುರಾಗದಂತೆ ಖರೀದಿಸಲು ಅನುದಾನ ಇದೆ ಎಂದರು.
ವಿಧಾನಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಅನುಭವ ದಿನೇಶ್ ಗುಂಡೂರಾವ್ ಅವರಿಗೆ ಇದೆ. ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಆದ್ಯತೆ ಮೇರೆಗೆ ಬಗೆಹರಿಸಬೇಕು. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಆ ಮೂಲಕ ಬಡವರಿಗೆ ಗುಣಮಟ್ಟದ ಚಿಕಿತ್ಸೆ ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.
ಶಾಸಕರಾದ ಜಿ.ಎಚ್.ಶ್ರೀನಿವಾಸ್, ಕೆ.ಎಸ್.ಆನಂದ್, ಜಿಲ್ಲಾಧ್ಯಕ್ಷ ಡಾ. ಅಂಶುಮಾನ್, ಮುಖಂಡರಾದ ಎಂ.ಎಲ್.ಮೂರ್ತಿ, ವಿಜಯಕುಮಾರ್, ಮಂಜೇಗೌಡ, ಶಿವಾನಂದಸ್ವಾಮಿ, ಕೆ.ಮಹಮ್ಮದ್ ಇತರರಿದ್ದರು.