ಉಜ್ವಲ ಭವಿಷ್ಯಕ್ಕಾಗಿ ಉನ್ನತ ಶಿಕ್ಷಣ ಪಡೆಯಿರಿ: ಸಚಿವ ಬಿ.ಶ್ರೀರಾಮುಲು ಸಲಹೆ

New
Published on

ಗೌರಿಬಿದನೂರು: ಉಜ್ವಲ ಭವಿಷ್ಯದ ದೃಷ್ಟಿಯಿಂದ ಗುಣಮಟ್ಟದ ಉನ್ನತ ಶಿಕ್ಷಣ ಪಡೆಯಬೇಕು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಮಲ್ಲಸಂದ್ರದಲ್ಲಿ 22 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಪರಿಶಿಷ್ಟ್ಟ ವರ್ಗದ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆ ಉದ್ಘಾಟಿಸಿ ಮಾತನಾಡಿ, ರಾಜ್ಯ ಸರ್ಕಾರವು ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡುತ್ತಿದೆ. ಪರಿಶಿಷ್ಟ ವರ್ಗಗಳ ಇಲಾಖೆಯ 2 ಸಾವಿರ ವಸತಿ ನಿಲಯಗಳಲ್ಲಿ 1ಲಕ್ಷ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಇನ್ನು 4 ಸಾವಿರ ವಿದ್ಯಾರ್ಥಿಗಳು ಪ್ರೋತ್ಸಾಹಧನ ಪಡೆಯುತ್ತಿದ್ದಾರೆ ಎಂದರು.

ಹಿಂದೆ ತಾವು ಓದುವ ದಿನಗಳಲ್ಲಿ ಸಮರ್ಪಕ ಸೌಲಭ್ಯಗಳು ಇರಲಿಲ್ಲ. ಈಗ ಸರ್ಕಾರವು ಉತ್ತಮ ಶಿಕ್ಷಣ ಕಲಿಕಾ ವಾತಾವರಣ ಕಲ್ಪಿಸಿದೆ. ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿಯಿಂದ ಉತ್ತಮ ಅವಕಾಶಗಳು ದೊರೆಯುತ್ತಿವೆ ಎಂದರು.

ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಗೌರಿಬಿದನೂರು ತಾಲೂಕಿನಲ್ಲಿ ಪರಿಶಿಷ್ಟ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನಸಂಖ್ಯೆ ಹೆಚ್ಚಾಗಿ ಇದೆ. ಇಲ್ಲಿ ಅತ್ಯಾಧುನಿಕ ಸೌಲಭ್ಯಗಳುಳ್ಳ ವಿದ್ಯಾರ್ಥಿನಿಲಯ ನಿರ್ಮಿಸಲಾಗಿದೆ ಎಂದರು.

ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಮಾತನಾಡಿ, ಹೋಬಳಿಗೊಂದು ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ ತಲಾ 50 ಲಕ್ಷ ರೂ, ಅಂಬೇಡ್ಕರ್ ಅಧ್ಯಯನ ಕೇಂದ್ರದಲ್ಲಿ ಸ್ವರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರಕ್ಕೆ ಅನುದಾನ ನೀಡಬೇಕು. ತಾಲೂಕಿನ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಪಿ.ಎಸ್.ಕಾಂತರಾಜು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಹೇಮಲತಾ, ತಹಸೀಲ್ದಾರ್ ಎಚ್.ಶ್ರೀನಿವಾಸ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪಾಂಡುರಂಗ, ಮುಖಂಡರಾದ ಆರ್.ಅಶೋಕ್ ಕುಮಾರ್, ಬಿ.ಎನ್.ರಂಗನಾಥ್, ಪ್ರಕಾಶ್ ರೆಡ್ಡಿ, ಪಿ.ವಿ. ರಾಘವೇಂದ್ರ ಹನುಮಾನ್, ಚೈತ್ರಾ ಮತ್ತಿತರರು ಇದ್ದರು.

ಫೋಟೋ ಗ್ಯಾಲರಿ ವೀಕ್ಷಣೆ: ನಗರದ ಹನುಮಂತಪ್ಪ ಲೇಔಟ್‌ನಲ್ಲಿ ನೂತನವಾಗಿ ನಿರ್ಮಿಸಿರುವ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಉದ್ಘಾಟಿಸಿದ ಸಚಿವರು, ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಿ ಫೋಟೋ ಗ್ಯಾಲರಿ ವೀಕ್ಷಿಸಿದರು. ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷ ರವಿ ನಾರಾಯಣ ರೆಡ್ಡಿ ಮತ್ತಿತರರು ಇದ್ದರು.

ಕಾಂಗ್ರೆಸ್ ಕುಮ್ಮಕ್ಕಿನಿಂದ ದೂರು

ಗೌರಿಬಿದನೂರು: ಕಾಂಗ್ರೆಸ್‌ಗೆ ಅನುಕೂಲ ಮಾಡಿಕೊಡಲು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಮಿಷನ್ ಆರೋಪಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಕುಮ್ಮಕ್ಕು ಇದೆ ಎಂದು ಸಚಿವ ಬಿ.ಶ್ರೀರಾಮುಲು ಆರೋಪಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ದಾಖಲೆಗಳು ಇದ್ದರೆ ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಿ, ಇದನ್ನು ಬಿಟ್ಟು ವಿನಾಕಾರಣ ಸರ್ಕಾರವನ್ನು ದೂಷಿಸುವುದು ಸರಿಯಲ್ಲ ಎಂದರು.

ಕಾಂಗ್ರೆಸ್ ಕುಮ್ಮಕ್ಕಿನಿಂದ ಆರೋಪಗಳು ಕೇಳಿ ಬರುತ್ತಿವೆ. ಕೇವಲ ಕಾಂಗ್ರೆಸ್‌ಗೆ ಅನುಕೂಲ ಮಾಡಿಕೊಡುವ ಉದ್ದೇಶ ಇದೆ ಎನಿಸುತ್ತದೆ ಎಂದರು.

ಕುಮಾರಸ್ವಾಮಿ ಸಾಚಾನಾ?:

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಾಚಾನಾ?. ಅವರು ಸಿಎಂ ಆಗಿದ್ದಾಗ ರಾಜ್ಯವನ್ನು ಲೂಟಿ ಮಾಡಿದ್ದಾರೆ. ಇದೀಗ ಭೂತದ ಬಾಯಲ್ಲಿ ಭಗವದ್ಗೀತೆ ಎಂಬಂತೆ ಮಾತನಾಡುತ್ತಿದ್ದಾರೆ ಎಂದು ಸಚಿವ ಬಿ.ಶ್ರೀರಾಮುಲು ಕಿಡಿಕಾರಿದರು.

ರಾಜ್ಯ ಗುತ್ತಿಗೆದಾರರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವ ಸಚಿವ ಮುನಿರತ್ನ ಹೇಳಿಕೆಗೆ ಪ್ರತಿಯಾಗಿ ಮೊಕದ್ದಮೆ ಹಾಕುವುದಕ್ಕೆ ಯಾರಿಗಿದೆ ಮಾನ? ಎಂಬುದಾಗಿ ಪ್ರಶ್ನಿಸಿದ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿ ಆಡಳಿತ ಅವಧಿಯಲ್ಲಿನ ಭ್ರಷ್ಟಾಚಾರಗಳನ್ನು ಬಿಜೆಪಿ ಸರ್ಕಾರ ಪ್ಯಾಚ್‌ಅಪ್ ಮಾಡುತ್ತಿದೆ ಎಂತಲೂ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೆಟ್ಟ ಹೆಸರು ತರಲು ಪ್ರಯತ್ನಿಸಲಾಗುತ್ತಿದೆ. ಬೇರೆಯವರು ಹೇಳಿಕೊಟ್ಟಿದ್ದನ್ನು ಹೇಳುವ ಕೆಲಸ ಗುತ್ತಿಗೆದಾರರಿಂದ ಆಗುತ್ತಿದೆ ಎಂದು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net