

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಡೆಂಘಿ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಜೌಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.
ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ. ಡೆಂಘಿ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದು ಕರೆ ನೀಡಿದ್ದಾರೆ.