

ಶಿವಮೊಗ್ಗ: ನಗರ ಪಾಲಿಕೆ ವ್ಯಾಪ್ತಿಯ 86 ಸರ್ಕಾರಿ ಶಾಲೆಗಳಿಗೆ ಮೂಲಸೌಲಭ್ಯ ಕಲ್ಪಿಸಲು 15 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದ್ದು, ಡಿಸೆಂಬರ್ ಅಂತ್ಯದೊಳಗೆ ಸಂಪೂರ್ಣ ಕಾಮಗಾರಿ ಮುಗಿಸುವಂತೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಸತತ ಎರಡನೇ ದಿನವಾದ ಶುಕ್ರವಾರವೂ ನಗರದ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ, ಸರ್ಕಾರಿ ಶಾಲೆಗಳ ದುರಸ್ತಿ ಕಾಮಗಾರಿಗಳ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆ ಆರಂಭದೊಳಗಾಗಿ ಪಾಲಿಕೆ ವ್ಯಾಪ್ತಿಯ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಎಂದರು.
ಕೆಲ ಗುತ್ತಿಗೆದಾರರು ಕಪ್ಪುಪಟ್ಟಿಗೆ
ಟೆಂಡರ್ ಪ್ರಕ್ರಿಯೆ ಮುಗಿದು ಕಾರ್ಯಾದೇಶ ಪಡೆದರೂ ಶಾಲಾ ದುರಸ್ತಿ ಕಾಮಗಾರಿಗಳನ್ನು ಆರಂಭಿಸದ ಗುತ್ತಿಗೆದಾರರ ಟೆಂಡರ್ ರದ್ದುಗೊಳಿಸಿ ಅವರನ್ನು ಕಪ್ಪುಪಟ್ಟಿಗೆ ಸೇರಿಸಿ ಮೊಕದ್ದಮೆ ದಾಖಲಿಸಬೇಕು ಎಂದು ಸೂಚನೆ ನೀಡಿದ ಸಚಿವರು, ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದೆಂದು ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಮೊದಲ ಬಾರಿಗೆ ಶಿವಮೊಗ್ಗ ನಗರ ಪ್ರದೇಶದ ಸರ್ಕಾರಿ ಶಾಲೆಗಳ ದುರಸ್ತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಇದರಲ್ಲಿ 10 ಕೋಟಿ ರೂ. ವಿಶೇಷ ಅನುದಾನದ ಜೊತೆಗೆ ನೈಸರ್ಗಿಕ ವಿಕೋಪ ಪರಿಹಾರ ನಿಧಿಯಡಿ 4.5 ಕೋಟಿ ರೂ. ನೀಡಲಾಗಿದೆ ಎಂದರು.
ಕೊಠಡಿಗಳ ದುರಸ್ತಿ, ಹೊಸ ಕೊಠಡಿ ಮತ್ತು ಶೌಚಗೃಹಗಳು, ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತಿದೆ. ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಪೀಠೋಪಕರಣಗಳನ್ನು ಒದಗಿಸಲಾಗುತ್ತಿದೆ. 10 ಪ್ರೌಢಶಾಲೆಗಳು ಮತ್ತು 76 ಪ್ರಾಥಮಿಕ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲಾಗುತ್ತಿದೆ. 36 ಶಾಲೆಗಳಲ್ಲಿ ಕಾಮಗಾರಿಗಳು ಪೂರ್ಣಗೊಂಡಿದ್ದು, 30 ಶಾಲೆಗಳ ಕಾಮಗಾರಿ ಪ್ರಗತಿಯಲ್ಲಿವೆ. ಇನ್ನೂ 20 ಶಾಲೆಗಳಲ್ಲಿ ಕಾಮಗಾರಿ ಆರಂಭವಾಗಬೇಕಿದೆ ಎಂದು ಹೇಳಿದರು.
ಕರ್ನಾಟಕ ಪಬ್ಲಿಕ್ ಶಾಲೆ, ಬಿಬಿ ರಸ್ತೆ ಶಾಲೆ, ದೊಡ್ಡಪೇಟೆ ಶಾಲೆ, ಭೂಪಾಳಂ ಶಾಲೆ, ಎಸ್‌ಪಿಎಂ ರಸ್ತೆ ಸರ್ಕಾರಿ ಶಾಲೆಗಳಿಗೆ ಸಚಿವರು ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದರು. ಎಸ್‌ಡಿಎಂಸಿ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಡಿಡಿಪಿಐ ಎನ್.ಎಂ.ರಮೇಶ್ ಮುಂತಾದವರು ಸಚಿವರಿಗೆ ಸಾಥ್ ನೀಡಿದರು.