ಜನಿವಾರ ತೆಗೆಸಿದ ಪ್ರಕರಣ; ಸರ್ಕಾರ ಬೇಷರತ್​ ಕ್ಷಮೆಯಾಚಿಸಲಿ; ವಿಜಯೇಂದ್ರ ಒತ್ತಾಯ | Apologize

dk - 2025-04-18T122815.149
Published on

Apologize : ಬೀದರ್​ನಲ್ಲಿ ಜನಿವಾರ ಧರಿಸಿದ್ದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದೇ, ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ಕಿತ್ತೆಸೆಯಲು ದರ್ಪ ಮೆರೆದು ವಿದ್ಯಾರ್ಥಿಯ ಭವಿಷ್ಯಕ್ಕೆ ಕಲ್ಲು ಹಾಕಿದ ಅಧಿಕಾರಿ, ಸಿಬ್ಬಂದಿಗಳ ವರ್ತನೆ ಅತ್ಯಂತ ಹೇಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ.

ಈ ರೀತಿಯ ಬೌದ್ಧಿಕ ವಿಕೃತಿ ಹಾಗೂ ಮನುಷ್ಯತ್ವ ಇಲ್ಲದ ನಡೆ ಇನ್ನೊಂದಿರಲಾರದು, ಇದು ಕಾಂಗ್ರೆಸ್ ಸರ್ಕಾರದ ಹೀನ ಮನಸ್ಥಿತಿಯ ಮುಖವಾಡವನ್ನು ಪ್ರದರ್ಶಿಸಿದೆ ಎಂದು ಕಿಡಿಕಾರಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡ ವಿಜಯೇಂದ್ರ, '' ಪರೀಕ್ಷೆ ಹಾಗೂ ಸಂದರ್ಶನ ಎದುರಿಸುವ ವೇಳೆ ಕೆಲ ವಸ್ತುಗಳನ್ನು ಕೊಂಡೊಯ್ಯುವುದು ನಿಷಿದ್ಧ. ಆದರೆ, ಜನಿವಾರ ತೊಡುವುದು ಒಂದು ಕುಟುಂಬ ಹಾಗೂ ಭಾರತೀಯ ಸಮುದಾಯದ ಆಚಾರ ವಿಚಾರಕ್ಕೆ ಸಂಬಂಧಿಸಿದ್ದು, ವಿದ್ಯಾರ್ಥಿ ಬರೆಯುವ ಪರೀಕ್ಷೆಯ ಮೇಲೆ ಜನಿವಾರ ಏನು ಪ್ರಭಾವ ಅಥವಾ ಪರಿಣಾಮ ಬೀರುತ್ತದೆ? ಎಂಬುದಕ್ಕೆ ಸಂಬಂಧಿಸಿದ ಸಚಿವರು ಹಾಗೂ ಸರ್ಕಾರ ಉತ್ತರಿಸಬೇಕು. ಶಿಕ್ಷಣವೆಂದರೆ ಸಂಸ್ಕಾರ, ಅದು ಇಲ್ಲದವರು ಶಿಕ್ಷಣ ಖಾತೆಯನ್ನು ನಿರ್ವಹಿಸಿದರೆ ಏನು ಪರಿಣಾಮ ಬೀರಬಹುದು ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದಿದ್ದಾರೆ.

ಮುಖ್ಯಮಂತ್ರಿಗಳು ಈ ಸಂಬಂಧವಾಗಿ ವಿದ್ಯಾರ್ಥಿಯ ಭವಿಷ್ಯಕ್ಕೆ ಕಲ್ಲು ಹಾಕಿ ಹಿಂದು ಸಂಪ್ರದಾಯದ ಆಚಾರ ವಿಚಾರವನ್ನು ಅಪಮಾನಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾಗಲಿ. ಸನಾತನ ಹಿಂದು ಧರ್ಮದ ಆಚಾರ ವಿಚಾರಗಳಿಗೆ ಮಾರ್ಗದರ್ಶನ ತೋರುವ ಸಭ್ಯ ಬ್ರಾಹ್ಮಣ ಸಮುದಾಯವನ್ನು ಅಪಮಾನಿಸಿರುವ ರಾಜ್ಯ ಸರ್ಕಾರ ಈ ಕೂಡಲೇ ಬೇಷರತ್ ಕ್ಷಮೆಯಾಚಿಸಲಿ ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net