

ಬೆಂಗಳೂರು: ರಾಜ್ಯದ 21 ಜಿಲ್ಲೆಗೆ ಎರಡು ಹೆಚ್ಚುವರಿ ಪೊಲೀಸ್ ಅಧೀಕ್ಷಕರ (ಎಎಸ್‌ಪಿ) ಹುದ್ದೆಗಳನ್ನು ಸೃಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಇಬ್ಬರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ) ನಿರ್ದೇಶನದಂತೆ ಕರ್ತವ್ಯ ನಿರ್ವಹಿಸುತ್ತಾರೆ.
21 ಜಿಲ್ಲಾ ಪೊಲೀಸ್ ಘಟಕಗಳಲ್ಲಿ 2 ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆಗಳನ್ನು ಸೃಜಿಸಲಾಗಿದ್ದು, ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ-2 ಎಂದು ವಿಂಗಡಿಸಿ ಈ ಇಬ್ಬರಿಗೂ ಕರ್ತವ್ಯ ಹಂಚಿಕೆ ಮಾಡಲಾಗಿದೆ. ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಅವರಿಗೆ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆಯ ಜವಬ್ಧಾರಿ ವಹಿಸಿದರೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ-2 ಅವರಿಗೆ ಅಪರಾಧ ಮತ್ತು ನ್ಯಾಯಾಲಯಗಳ ವಿಚಾರಣೆ ಮತ್ತು ನಿರ್ವಹಣೆಯ ಜವಬ್ಧಾರಿಯನ್ನು ವಹಿಸಲಾಗಿದೆ.
ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಕರ್ತವ್ಯ:
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ಸಂಚಾರಕ್ಕೆ ಸಂಬಂಧಿಸಿದ ಎಲ್ಲಾ ಕರ್ತವ್ಯಗಳು ಸೇರಿ ಜಿಲ್ಲಾ ಪೊಲೀಸ್ ಅಧೀಕ್ಷಕರ ನಿರ್ದೇಶನದಂತೆ ಕರ್ತವ್ಯ ನಿರ್ವಹಿಸುವುದು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ-2 ಕರ್ತವ್ಯ:
ಜಿಲ್ಲೆಯಲ್ಲಿ ಅಪರಾಧ, ನ್ಯಾಯಾಲಯಗಳ ವಿಚಾರಣೆ ನಿರ್ವಹಣೆ, ಡಿಎಆರ್ ಕೇಂದ್ರ ಕಚೇರಿ ಹಾಗೂ ಜಿಲ್ಲಾ ಪೊಲೀಸ್ ಕಚೇರಿಗೆ ಸಂಬಂಧಿಸಿದ ವಿವಿಧ ಕರ್ತವ್ಯ ನಿರ್ವಹಣೆ ಸೇರಿ ಜಿಲ್ಲಾ ಪೊಲೀಸ್ ಅಧೀಕ್ಷಕರ ನಿರ್ದೇಶನದಂತೆ ಕರ್ತವ್ಯ ನಿರ್ವಹಿಸುವುದು.