

ಬೆಂಗಳೂರು: ವೇತನ ಪರಿಷ್ಕರಣೆ ಸೇರಿ ತಮ್ಮ ವಿವಿಧ ಬೇಡಿಕೆಗಳನ್ನು ಒಂದು ವಾರದೊಳಗೆ ಈಡೇರಿಸದಿದ್ದರೆ ಹಂತ ಹಂತವಾಗಿ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಆರೋಗ್ಯ ಇಲಾಖೆಯ 4,968 ವೈದ್ಯರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರಿ ಗುತ್ತಿಗೆ ವೈದ್ಯರು ಹಾಗೂ ಆಯುಷ್ ವೈದ್ಯರು ವೇತನ ಪರಿಷ್ಕರಣೆಗೆ ಆಗ್ರಹಿಸಿ ಮುಷ್ಕರ ನಡೆಸಿದ್ದರು. ಸರ್ಕಾರ ಅವರ ಬೇಡಿಕೆ ಈಡೇರಿಸಿತ್ತು. ಇದೇ ವೇಳೆ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಕೂಡ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಮನವಿ ಪತ್ರ ಸಲ್ಲಿಸಿ, ಬೇಡಿಕೆಗಳನ್ನು ಈಡೇರಿಸಲು ಕೋರಿತ್ತು.
ನಂತರ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣದ ಬಳಿಕ ವೈದ್ಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮತ್ತೊಮ್ಮೆ ಒತ್ತಾಯಿಸಿದ್ದರು. ಆಗ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದ ಸರ್ಕಾರ ಈವರೆಗೂ ಕ್ರಮ ಕೈಗೊಳ್ಳದಿರುವುದರಿಂದ ಮುಂದಿನ ವಾರದಿಂದ ವೈದ್ಯರು ತುರ್ತು ಚಿಕಿತ್ಸೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಸೇವೆ ಸ್ಥಗಿತ ಮಾಡಲು ನಿರ್ಧರಿಸಿದ್ದಾರೆ.