

ಬೆಂಗಳೂರು: ಕೇಂದ್ರ ಸರ್ಕಾರ ನಿಗದಿಪಡಿಸಿದ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಗಿಂತ ಮುಕ್ತ ಮಾರುಕಟ್ಟೆಯಲ್ಲಿ ಬೆಲೆ ಕುಸಿದರೆ ರಾಜ್ಯ ಸರ್ಕಾರ ಮಧ್ಯೆ ಪ್ರವೇಶಿಸಿ, ಎಂಎಸ್‌ಪಿಯಡಿ ಖರೀದಿ ಕೇಂದ್ರಗಳನ್ನು ತೆರೆದು ಪ್ರಕ್ರಿಯೆ ಶುರುಮಾಡಬೇಕಾಗಿತ್ತು.
ಆದರೆ ಮುಕ್ತ ಮಾರುಕಟ್ಟೆಯಲ್ಲಿ ಭತ್ತ, ತೊಗರಿ ಬೆಲೆಗಳು ಕುಸಿದು ರೈತರು ಕಂಗೆಟ್ಟಿದ್ದಾರೆ. ಕಲಬುರಗಿ, ಮಂಡ್ಯ ಮತ್ತಿತರ ಜಿಲ್ಲೆಗಳ ರೈತರು ಹೋರಾಟಕ್ಕೆ ಇಳಿದಿದ್ದರೂ ಕಾಂಗ್ರೆಸ್ ಕಡೆಗಣಿಸಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಬಲ ಬೆಲೆ ಯೋಜನೆಯಡಿ ಆಹಾರಧಾನ್ಯ ಖರೀದಿಗಾಗಿ ರಾಜ್ಯ ಸರ್ಕಾರ ಕಳುಹಿಸಿದ ಪ್ರಸ್ತಾವನೆ ಪ್ರಕಾರ ಕೇಂದ್ರ ಅನುಮೋದನೆ ನೀಡಿದೆ. ಅಲ್ಲದೆ, ಭತ್ತ, ತೊಗರಿ, ಹತ್ತಿ ಸೇರಿ ಎಂಎಸ್‌ಪಿ ವ್ಯಾಪ್ತಿಗೆ ಬರುವ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಗೊತ್ತುಪಡಿಸಿದೆ.
ಮಂಡ್ಯದಲ್ಲಿ ಭತ್ತ ಖರೀದಿ ಕೇಂದ್ರಗಳು ಆರಂಭವಾಗದ ಕಾರಣ ರೈತರು ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಭತ್ತದ ದಲ್ಲಾಳಿಗಳಿಗೆ ಮಾರಾಟ ಮಾಡುವ ಅನಿವಾರ್ಯತೆ ಎದುರಾಗಿದೆ.
ಕ್ವಿಂಟಾಲ್ ಭತ್ತಕ್ಕೆ ಮೂರು ಸಾವಿರ ರೂ. ಬೆಂಬಲ ಬೆಲೆ ನಿಗದಿಯಾಗಿದ್ದರೂ ಸರ್ಕಾರ ಭತ್ತ ಖರೀದಿ ಕೇಂದ್ರ ಕಾರಣ ದಲ್ಲಾಳಿಗಳಿಗೆ 1,800 ರಿಂದ 2,000 ರೂ. ಮಾರಿ ರೈತರು ನಷ್ಟ ಅನುಭವಿಸುತ್ತಿದ್ದಾರೆ ಎಂದು ಆರ್.ಅಶೋಕ್ ಕಳವಳ ವ್ಯಕ್ತಪಡಿಸಿದ್ದಾರೆ.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಜಿಲ್ಲೆಯಲ್ಲಿ ಈ ಗತಿಯಾದರೆ ಇನ್ನು ಬೇರೆ ಜಿಲ್ಲೆಗಳ ಗತಿ ಏನಾಗಿರಬಹುದು ಎನ್ನುವುದನ್ನು ಹೇಳಬೇಕಾಗಿಲ್ಲ. ತೊಗರಿ ಬೆಳೆಗಾರರು ಎರಡು ರೀತಿಯಿಂದ ನಷ್ಟ ಅನುಭವಿಸಿದರೂ ಖರೀದಿ ಕೇಂದ್ರ ತೆರೆದೀತು ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.
ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾದ ತೊಗರಿ ಬೆಲೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದರೆ, ಸರ್ಕಾರ ಖರೀದಿ ಕೇಂದ್ರ ತೆರೆಯುವ ಲಕ್ಷಣಗಳೇ ಕಾಣುತ್ತಿಲ್ಲ. ಈ ಬಾರಿ ತೇವಾಂಶ ಕೊರತೆಯಿಂದ 1.82 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ದಾಖಲೆಗಳು ಹೇಳುತ್ತವೆ.
ಕಾಂಗ್ರೆಸ್ ಸರ್ಕಾರದಲ್ಲಿ ಒಬ್ಬರು ಕುರ್ಚಿ ಉಳಿಸಿಕೊಳ್ಳಲು ತಂತ್ರ ಹೆಣೆಯುತ್ತಿದ್ದರೆ, ಇನ್ನೊಬ್ಬರು ಕುರ್ಚಿ ಕಿತ್ತುಕೊಳ್ಳಲು ಕತ್ತಿ ಮಸೆಯುತ್ತಿದ್ದಾರೆ. ಇವರಿಬ್ಬರ ನಡುವೆ ಅತಂತ್ರರಾಗಿರುವ ಮಂತ್ರಿಗಳು ಅವರವರ ಅಸ್ತಿತ್ವ ಉಳಿಸಿಕೊಳ್ಳಲು ಡಿನ್ನರ್ ಮೀಟಿಂಗ್, ರಹಸ್ಯ ಸಭೆ ಮಾಡಿ ಕಾಲಹರಣ ಮಾಡುತ್ತಿದ್ದಾರೆ.
ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಇವೆಲ್ಲದರ ನಡುವೆ ರಾಜ್ಯದಲ್ಲಿ ಅಡಳಿತ ಯಂತ್ರ ಸಂಪೂರ್ಣ ಕುಸಿದು ರೈತರ ಕಷ್ಟ ಕೇಳಲು ಸರ್ಕಾರವೇ ಇಲ್ಲದಂತಾಗಿದೆ. ರೈತ ವಿರೋಧಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೊಲಗುವವರೆಗೂ ನಾಡಿನ ಅನ್ನದಾತರಿಗೆ ನೆಮ್ಮದಿಯಿಲ್ಲವೆಂದು ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.