ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತ

IMG_20240421_133552927
Published on

ಗುಂಡ್ಲುಪೇಟೆ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದ್ದು, ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಭಾನುವಾರ ಬಿಜೆಪಿ ಆಯೋಜಿಸಿದ್ದ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷ ದಿವಾಳಿಯಾಗಿದ್ದು, ಜತೆಗೆ ಸರ್ಕಾರದ ಖಜಾನೆ ಖಾಲಿ ಮಾಡಿದೆ. ರಾಜ್ಯದ ಯಾವುದೇ ಭಾಗದಲ್ಲಿಯೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಪ್ರತಿ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೂ ಅಭಿವೃದ್ಧಿ ಕುಂಠಿತವಾಗುತ್ತಿದೆ. ಕೇವಲ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಾ ಬರುತ್ತಿದೆ. ಕೇವಲ 40-50 ಕ್ಷೇತ್ರಗಳಲ್ಲಿಯೂ ಗೆಲ್ಲಲು ಸಾಧ್ಯವಾಗದಿದ್ದರೂ ನಾವು ಅಧಿಕಾರಕ್ಕೆ ಬಂದರೆ ಏನೇನು ಮಾಡುತ್ತೇವೆ ಎಂದು ಸುಳ್ಳು ಭರವಸೆ ನೀಡುತ್ತಿದೆ ಎಂದರು.
ತಮ್ಮ ಪ್ರಧಾನಿ ಅಭ್ಯರ್ಥಿ ಯಾರು ಎಂಬುದನ್ನೇ ಹೇಳಲು ಸಾಧ್ಯವಾಗದ ಕಾಂಗ್ರೆಸ್ ಲೋಕಸಭಾ ಚುನಾವಣೆ ಗೆಲ್ಲಲು ಹಣ, ಹೆಂಡ ಹಾಗೂ ತೋಳ್ಬಲ ಬಳಸುತ್ತಿದೆ. ಸಮಾಜದಲ್ಲಿ ಜಾತಿಯ ವಿಷಬೀಜ ಬಿತ್ತುತ್ತಿದೆ. ಆದರೆ ಜನ ಜಾಗೃತರಾಗಿದ್ದು ಮೋಸ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.
ಕಳೆದ 10 ವರ್ಷದಲ್ಲಿ ಮೋದಿ ಒಂದು ದಿನವೂ ವಿಶ್ರಾಂತಿ ಪಡೆಯದೆ ದೇಶಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಮಾಡಿರುವ ಕೆಲಸಗಳನ್ನು ಇಡೀ ವಿಶ್ವವೇ ಕೊಂಡಾಡುತ್ತಿದ್ದು, ಅವರ ನೇತೃತ್ವದಲ್ಲಿ ಬಿಜೆಪಿ ಚುನಾವಣೆ ಎದುರಿಸುತ್ತಿದೆ. ನಾವು ರಾಜ್ಯಾದ್ಯಂತ ಪ್ರವಾಸ ಮಾಡಿದ್ದು ಎಲ್ಲೆಡೆಯೂ ನಮ್ಮ ನಿರೀಕ್ಷೆ ಮೀರಿ ಜನ ಸ್ಪಂದಿಸುತ್ತಿದ್ದಾರೆ. ಮೋದಿ ಸರ್ಕಾರ ರಾಜ್ಯದ 54 ಲಕ್ಷ ರೈತರಿಗೆ 12,534 ಕೋಟಿ ರೂ. ಕಿಸಾನ್ ಸಮ್ಮಾನ್, ರಾಜ್ಯದ 74 ಲಕ್ಷ ಮನೆಗಳಿಗೆ ಶುದ್ಧ ಕುಡಿಯುವ ನೀರು, 40.74 ಲಕ್ಷ ಕನ್ನಡಿಗರಿಗೆ ಉಚಿತ ಎಲ್‌ಪಿಜಿ ಅನಿಲ ವಿತರಣೆ, 4.1 ಕೋಟಿ ಬಡ ಕನ್ನಡಿಗರಿಗೆ ಗರೀಬ್ ಕಲ್ಯಾಣ್ ಯೋಜನೆಯಲ್ಲಿ ಹಸಿವು ನೀಗಿಸಿದೆ. ಆದರೆ ಕೇಂದ್ರ ಸರ್ಕಾರ ಕೊಡುವ ಅಕ್ಕಿಯನ್ನು ಕಾಂಗ್ರೆಸ್ ತಾನು ನೀಡುತ್ತಿರುವುದಾಗಿ ತಪ್ಪು ಮಾಹಿತಿ ನೀಡುತ್ತಿದೆ ಎಂದು ಹರಿಹಾಯ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net