ಹೆಸರು, ಉದ್ದು ಬೆಂಬಲ ಬೆಲೆಗೆ ಖರೀದಿ: ಸಚಿವ ಶಿವಾನಂದ ಪಾಟೀಲ | Market price stability

Shivanand Patil
Published on

ಬೆಂಗಳೂರು: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿನ ಉದ್ದಿನಕಾಳು, ಹೆಸರುಕಾಳು ಹಾಗೂ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜಿಲ್ಲಾ ಟಾಸ್ಕ್‌ಪೋರ್ಸ್ ಸಮಿತಿಗಳಿಗೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸೂಚಿಸಿದ್ದಾರೆ.

ಖರೀದಿ ಏಜನ್ಸಿಗಳೊಂದಿಗೆ ಚರ್ಚೆ ಮಾಡಿ ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಶುರು ಮಾಡಬೇಕು. ನೋಂದಣಿಗೆ 80 ದಿನ ಹಾಗೂ ಖರೀದಿಗೆ 90 ದಿನ ಕಾಲಾವಧಿ ನಿಗದಿಪಡಿಸಿದ್ದು, ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಏಕಕಾಲಕ್ಕೆ ಆರಂಭಿಸಬೇಕು ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯಗಳ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಗಳನ್ನು ಖರೀದಿ ಏಜನ್ಸಿಗಳನ್ನಾಗಿ ನೇಮಕ ಮಾಡಲಾಗಿದೆ.

ಯಾವ ಜಿಲ್ಲೆ, ಯಾವ ಕಾಳು ಖರೀದಿ

ಗದಗ, ಧಾರವಾಡ, ಹಾವೇರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಯಾದಗಿರಿ, ಬೀದರ್, ತುಮಕೂರು, ಹಾಸನ, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹೆಸರುಕಾಳು ಖರೀದಿಸಲಾಗುತ್ತದೆ.

ಕಲಬುರಗಿ, ಬೀದರ್, ಯಾದಗಿರಿ, ಗದಗ, ಧಾರವಾಡ, ವಿಜಯಪುರ ಬಾಗಲಕೋಟ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಉದ್ದಿನಕಾಳು ಖರೀದಿಯಾಗುತ್ತದೆ.

ಬಾಗಲಕೋಟೆ, ಬಳ್ಳಾರಿ, ಚಾಮರಾಜ ನಗರ, ಚಿತ್ರದುರ್ಗ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ವಿಜಯನಗರ, ಯಾದಗಿರಿ, ಮೈಸೂರು, ಚಿಕ್ಕಮಗಳೂರು, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸೂರ್ಯಕಾಂತಿ ಖರೀದಿ ಮಾಡಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಖರೀದಿ ಸಂಸ್ಥೆಗಳು ರೈತರಿಗೆ ಅನುಕೂಲವಾಗುವಂತೆ ನಾಫೆಡ್ ಹಾಗೂ ಎನ್‌ಸಿಸಿಎಫ್ ಮಾರ್ಗಸೂಚಿ ಅನ್ವಯ ಹಾಗೂ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಗೋದಾಮುಗಳನ್ನು ಹೊಂದಿರುವ ಸಂಸ್ಥೆಗಳ ಮೂಲಕ ಒಡಂಬಡಿಕೆ ಮಾಡಿಕೊಂಡು ಖರೀದಿ ಕೇಂದ್ರ ತೆರೆಯಬೇಕು ಎಂದು ಹೇಳಿದ್ದಾರೆ.

ದುರ್ಬಳಕೆ ಸಲ್ಲದು

ಬೆಂಬಲ ಬೆಲೆ ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳಲು ವರ್ತಕರಿಗೆ ಅವಕಾಶ ನೀಡಬಾರದು. ರೈತರ ಹೆಸರಿನಲ್ಲಿ ಮಾರಾಟ ಮಾಡಲು ಬರುವ ವರ್ತಕರ ಬಗ್ಗೆ ಎಚ್ಚರಿಕೆ ವಹಿಸಬೇಕು, ಅವರಿಂದ ಖರೀದಿ ಮಾಡಬಾರದು ಎಂದು ಸಚಿವ ಶಿವಾನಂದ ಪಾಟೀಲ ಸೂಚಿಸಿದ್ದಾರೆ.

ರಾಜ್ಯ ಸರ್ಕಾರದ ಕೋರಿಕೆಯನ್ನು ಕೇಂದ್ರ ಸರ್ಕಾರ ಪುರಸ್ಕರಿಸಿ, ಕನಿಷ್ಠ ಬೆಂಬಲ ಯೋಜನೆಯಡಿ 2025-26ನೇ ಸಾಲಿನಲ್ಲಿ 38 ಸಾವಿರ ಮೆಟ್ರಿಕ್ ಟನ್ ಹೆಸರು ಕಾಳು, 60,810 ಟನ್ ಉದ್ದು, 15,650 ಟನ್ ಸೂರ್ಯಕಾಂತಿ, 61,148 ಟನ್ ಕಡಲೆಬೀಜ ಮತ್ತು 1.15 ಲಕ್ಷ ಟನ್

ಸೋಯಾಬೀನ್ ಖರೀದಿಗೆ ಅನುಮತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net