

ಬೆಂಗಳೂರು: ಚುನಾವಣೆ ಪೂರ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 27ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ಸಚವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಬಳಿಕ ಮಾತನಾಡಿದ ಸಚಿವೆ ಕಾರ್ಯಕ್ರಮದ ಉದ್ಘಾಟನೆಗೆ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 27ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು. ಈ ಸಂಬಂಧ ಎಲ್ಲಾ ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ ಸೇರಿದಂತೆ ರಾಜ್ಯಾದ್ಯಂತ ಏಕಕಾಲದಲ್ಲಿ 11 ಸಾವಿರ ಕಡೆ ಯೋಜನೆಯನ್ನು ಉದ್ಘಾಟಿಸಲು ಉದ್ದೇಶಿಸಲಾಗಿದೆ.
ಪ್ರತಿ ಪಂಚಾಯಿತಿಗೆ ಒಬ್ಬರಂತೆ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ. ಪಕ್ಷಾತೀತವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಈ ಸಂಬಂಧ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.