'ಗ್ಯಾರಂಟಿ' ಬಾಧಿತರ ಬದುಕಿಗೆ ಪರಿಹಾರ ನೀಡಿ; ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

kumaraswamy
Published on

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ 'ಅಡ್ಡ ಪರಿಣಾಮ'ದ ತೀವ್ರತೆ ಜನರಿಗೆ ತಟ್ಟುತ್ತಿದೆ.

ಸರ್ಕಾರಿ ಸೌಲಭ್ಯಗಳ ಹಂಚಿಕೆಯಲ್ಲಿನ ಅಸಮಾನತೆ, ಪಕ್ಷಪಾತವು ಅರಾಜಕತೆ ಸೃಷ್ಟಿಸಿದೆ ಎಂದು ಮಾಜಿ ಸಿಎಂ‌ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಅವೈಜ್ಞಾನಿಕ, ಅರೆಬೆಂದ 'ಶಕ್ತಿ' ಯೋಜನೆಯ ಫಲವಾಗಿ ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ.

ಸಾಲಸೋಲ ಮಾಡಿ ಕ್ಯಾಬ್, ಆಟೋ ಓಡಿಸಿಕೊಂಡು ಬದುಕುತ್ತಿದ್ದವರು ಬೀದಿ ಪಾಲಾಗಿದ್ದಾರೆ. ನಿತ್ಯದ ಬದುಕು ಸಾಗಿಸುವುದೇ ದುಸ್ತರ ಎನ್ನುವ ಸ್ಥಿತಿಯಲ್ಲಿ ಅವರಿದ್ದಾರೆ. ಇನ್ನು, ಸರ್ಕಾರಿ ಸಾರಿಗೆಯಷ್ಟೇ ಉತ್ತಮವಾಗಿ ಸೇವೆ ಒದಗಿಸುತ್ತಿರುವ ಖಾಸಗಿ ಬಸ್ ಜಾಲವನ್ನು ಸರ್ಕಾರ ಹಾಳು ಮಾಡಿದೆ. ಅನೇಕರ ಬದುಕಿಗೆ ಗ್ಯಾರಂಟಿ ಇಲ್ಲದಂತೆ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಂದ್ ನಿಂದ ಸರ್ಕಾರಿ ಸಾರಿಗೆಗೆ ಪರ್ಯಾಯವಾಗಿದ್ದ ಖಾಸಗಿ ಸಾರಿಗೆ ಜಾಲ ಸಂಪೂರ್ಣ ಸ್ಥಗಿತವಾಗಿದೆ. ಶಾಲಾ ಮಕ್ಕಳು, ಸಾರ್ವಜನಿಕರು, ವಿಮಾನ ನಿಲ್ದಾಣಕ್ಕೆ ತೆರಳುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಣ್ಣು, ತರಕಾರಿ ಸೇರಿ ಅಗತ್ಯ ವಸ್ತುಗಳ ಸಾಗಣೆಯಲ್ಲಿ ವ್ಯತ್ಯಯ ಆಗಿದೆ.

ಸರ್ಕಾರವು ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು. ಅವರ ಬೇಡಿಕೆಗಳು ಈಡೇರಿಸಲಾಗದ ಅಸಾಧ್ಯ ಡಿಮ್ಯಾಂಡ್ ಗಳಲ್ಲ. ಅವರಿಗೂ ಕುಟುಂಬಗಳಿವೆ, ತಂದೆ-ತಾಯಿ, ಮಕ್ಕಳು ಇರುತ್ತಾರೆ ಎನ್ನುವುದನ್ನು ಸರ್ಕಾರ ಮರೆಯಬಾರದು ಎಂದು ಸಲಹೆ ನೀಡಿದ್ದಾರೆ.

ಕಾಟಾಚಾರಕ್ಕೆ ಕರೆದು ಮಾತನಾಡುವುದಲ್ಲ. ವಾಸ್ತವತೆಗೆ ತಕ್ಕಂತೆ ಕಷ್ಟದಲ್ಲಿರುವ ಅವರಿಗೆ ನೆರವಾಗಬೇಕು. ನುಡಿದಂತೆಯೇ ನಡೆದು, 'ಗ್ಯಾರಂಟಿ ಬಾಧಿತರ' ಬದುಕಿಗೆ ಪರಿಹಾರ ಒದಗಿಸಬೇಕು. ತಕ್ಷಣ ಬಂದ್ ನಿರತರನ್ನು ಸಿಎಂ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕರೆದು ಮಾತನಾಡಬೇಕು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net