

ಬೆಂಗಳೂರು: ಬೇಲೆಕೇರಿ ಅದಿರು ಕಳವು ಮತ್ತು ರಫ್ತು ಮಾಡಿದ ಪ್ರಕರಣದಲ್ಲಿ ದೋಷಿ ಎಂದು ತೀರ್ಮಾನಿಸಿ, ಶಿಕ್ಷೆ ವಿಧಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪನ್ನು ರದ್ದುಪಡಿಸಿ ತಮ್ಮನ್ನು ಖುಲಾಸೆಗೊಳಿಸುವಂತೆ ಕೋರಿ ಮೆಸರ್ಸ್ ಶ್ರೀ ಲಕ್ಷ್ಮೀ ವೆಂಕಟೇಶ್ವರ ಮಿನರಲ್ಸ್ ಪಾಲುದಾರ ಕೆ. ಮಹೇಶ್ ಕುಮಾರ್ ಅಲಿಯಾಸ್ ಖಾರದಪುಡಿ ಮಹೇಶ್ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಹೊಸಪೇಟೆಯ ಖಾರದಪುಡಿ ಮಹೇಶ್ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು. ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದ ನ್ಯಾಯಪೀಠ, ವಿಚಾರಣೆ ಮುಂದೂಡಿತು.
ಪ್ರಕರಣದಲ್ಲಿ ಮಹೇಶ್ ಜೆ. ಬಿಳಿಯೆ, ಮೆಸರ್ಸ್ ಶ್ರೀ ಲಕ್ಷ್ಮಿ ವೆಂಕಟೇಶ್ವರ ಮಿನರಲ್ಸ್, ಅದರ ಪಾಲುದಾರ ಕೆ.ಮಹೇಶ್ ಕುಮಾರ್ ಅಲಿಯಾಸ್ ಖಾರದಪುಡಿ ಮಹೇಶ್, ಮೆಸರ್ಸ್ ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಸೈಲ್ ದೋಷಿಗಳು ಎಂದು ನ್ಯಾಯಾಲಯ ಶಿಕ್ಷೆ ವಿಧಿಸಿದೆ.