

ಕೋಲಾರ: ಹಾಸನದ ಪೆನ್ಡ್ರೈವ್ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಬಸ್ ನಿಲ್ದಾಣದ ವೃತ್ತದಲ್ಲಿ ಜಮಾಯಿಸಿದ ಎರಡೂ ಪಕ್ಷಗಳ ಕಾರ್ಯಕರ್ತರು ರಸ್ತೆ ಸಂಚಾರ ತಡೆದು, ಪೆನ್ಡ್ರೈವ್ ಪ್ರಕರಣದ ವಿಚಾರವಾಗಿ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಭಿಮಾನಕ್ಕೆ ಧಕ್ಕೆಯುಂಟು ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಮಾತನಾಡಿ, ಎಚ್.ಡಿ.ದೇವೇಗೌಡರ ಕುಟುಂಬಕ್ಕೆ ಮಸಿ ಬಳಿಯುವ ಉದ್ದೇಶದಿಂದ ಪೆನ್ಡೆವ್ ಪ್ರಕರಣದ ನೆಪದಲ್ಲಿ ರಾಜ್ಯದಲ್ಲಿ ಬೆಂಕಿಹಚ್ಚುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡಿದೆ. ಘಟನೆಯ ನೈಜತೆ ಹೊರಬರಬೇಕಾದರೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ಗೆ 125 ವರ್ಷಗಳ ಇತಿಹಾಸವಿದೆ. ಸುಮಾರು 57 ವರ್ಷ ಕಾಲ ಅಧಿಕಾರ ಅನುಭವಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ ಮತ್ತು ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಇಂತಹ ನೀಚ ರಾಜಕಾರಣಕ್ಕೆ ಕಾಂಗ್ರೆಸ್ ಇಳಿದಿದೆ ಎಂದರು.
ಪೆನ್ಡ್ರೈವ್ ಬಿಡುಗಡೆ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಕೈವಾಡ ಇದೆ ಎಂದು ಸ್ಪಷ್ಟವಾದ ಕೂಡಲೇ ಸ್ವಯಂ ರಕ್ಷಣೆ ಮಾಡಿಕೊಳ್ಳಲು ಎಸ್ಐಟಿ ತನಿಖಾ ಸಂಸ್ಥೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.
ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ವ್ಯಾಪಕ ಒತ್ತಾಯ ವ್ಯಕ್ತವಾಗಿದೆ. ಆದರೆ ಘಟನೆಯ ಹಿಂದಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾದ ರೀತಿಯಲ್ಲಿ ತನಿಖೆ ನಡೆಸುವಂತೆ ಮಾಡಿದ್ದು, ಯಾರನ್ನು ಬಂಧಿಸಬೇಕು, ಯಾರನ್ನು ಬಿಡಬೇಕು ಎಂಬ ಸರ್ಕಾರದ ಆಣತಿಯಂತೆ ಎಸ್ಐಟಿ ಅಧಿಕಾರಿಗಳು ನಡೆಯುತ್ತಿದ್ದಾರೆ. ಹಾಗಾಗಿ ಸಿಬಿಐಗೆ ಪ್ರಕರಣ ಹಸ್ತಾಂತರಿಸಬೇಕು ಎಂದು ಒತ್ತಾಯಿಸಿದರು.