ಸಂಘಟಿತರಾದರೆ ಸವಲತ್ತುಗಳನ್ನು ಪಡೆಯಲು ಸಾಧ್ಯ

29 HANUR 2
Published on

ಹನೂರು : ಸಂಘಟಿತರಾದರೆ ಮಾತ್ರ ಸರ್ಕಾರದಿಂದ ದೊರಕಬಹುದಾದ ಸವಲತ್ತುಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಅರಣ್ಯ ಇಲಾಖೆಯ ದಿನಗೂಲಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಂಕೇತ್ ಪೂವಯ್ಯ ತಿಳಿಸಿದರು. ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಆಗಸ್ಟ್‌ನಲ್ಲಿ ಬೆಂಗಳೂರು ಫ್ರೀಡಂ ಪಾರ್ಕ್

ಆವರಣದಲ್ಲಿ ಸಂಘ ನಡೆಸಲು ನಿರ್ಧರಿಸುವ ಮುಷ್ಕರದ ಹಿನ್ನೆಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ನೌಕರರ ಸಭೆಯಲ್ಲಿ ಅವರು ಮಾತನಾಡಿದರು. ದಿನಗೂಲಿ ನೌಕರರು ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಹಗಲಿರುಳು ಶ್ರಮಿಸುತ್ತಿದ್ದಾರೆ. ಅರಣ್ಯ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಆದರೆ 2016-17ನೇ ಸಾಲಿನಿಂದ ಕೆಲಸ ನಿರ್ವಹಿಸುತ್ತಿರುವ ದಿನಗೂಲಿ ನೌಕರರನ್ನು ಇಲಾಖೆ ನಿಯಮ ಬಾಹಿರವಾಗಿ ಹೊರಗುತ್ತಿಗೆ ನೌಕರರಾಗಿ ಪರಿಗಣಿಸಿ ಸುತ್ತೋಲೆ ಹೊರಡಿಸಿದೆ. ಇದು ನೌಕರರ ಭವಿಷ್ಯಕ್ಕೆ ಮಾರಕವಾಗಿದೆ. ಗುತ್ತಿಗೆದಾರರಿಗೆ ಲಾಭ ಮಾಡಿದೆ. ಇದರಿಂದ ತುಂಬಾ ತೊಂದರೆಯಾಗಿದೆ. ಇನ್ನು ಆನೆ, ಚಿರತೆ ಕಾರ್ಯಪಡೆ ನೌಕರರಿಗೆ ಮಾಸಿಕ 2 ಸಾವಿರ ರೂ ಪರಿಹಾರ ಭತ್ಯೆ ನೀಡುವಂತೆ ಅರಣ್ಯ ಸಚಿವರು ಆದೇಶ ಹೊರಡಿಸಿದ್ದಾರೆ. ಆದರೆ ಬಂಡೀಪುರ, ಬಿಆರ್‌ಟಿ ಹಾಗೂ ನಾಗರಹೊಳೆ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿನ ಸುಮಾರು 700 ನೌಕರರಿಗೆ ಪರಿಹಾರ ಭತ್ಯೆ ನೀಡಿಲ್ಲ ಎಂದರು.

ವನ್ಯಜೀವಿ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಚಾಲಕರಿಗೆ ಪರಿಹಾರ ನೀಡಿಲ್ಲ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಗಸ್ಟ್ ತಿಂಗಳಲ್ಲಿ

ವಿಧಾನಸಭೆ ಅಧಿವೇಶನ ನಡೆಯುವ ಸಂದರ್ಭ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಹನೂರು ಭಾಗದಿಂದ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.

ಮಲೆಮಹದೇಶ್ವರ ವನ್ಯಜೀವಿ ಧಾಮದಲ್ಲಿ ನೌಕರರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ 5 ಹುಲಿಗಳು ಮೃತಪಟ್ಟಿರುವುದು ನಿಜಕ್ಕೂ ಬೇಸರ ಎಂದರು. ಇದೇ ವೇಳೆ ಈ ಭಾಗದ ನೌಕರರ ಸಮಸ್ಯೆಯ ಬಗ್ಗೆ ಚರ್ಚಿಸಲಾಯಿತು. ಸಂಘದ ಗೌರವಾಧ್ಯಕ್ಷ ನಾಗರಾಜು, ಉಪಾಧ್ಯಕ್ಷ ಹರೀಶ್ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net