

ಶಿವಮೊಗ್ಗ: ಜಿಲ್ಲೆಯಲ್ಲಿ ಆ.13ರಿಂದ 15ರವರೆಗೆ ಪ್ರತಿಯೊಬ್ಬರೂ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಆದರೆ ಯಾವುದೇ ರೀತಿಯಲ್ಲೂ ರಾಷಧ್ವಜಕ್ಕೆ ಅಗೌರವವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಎಡಿಸಿ ಡಾ. ನಾಗೇಂದ್ರ ಹೊನ್ನಳ್ಳಿ ಮನವಿ ಮಾಡಿದರು.
ಡಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಭೆ ನಡೆಸಿದ ಅವರು, ಭಾರತ ಸ್ವಾತ್ರಂತ್ಯ ಅಮೃತ ಮಹೋತ್ಸವದ ಸಂಸ್ಮರಣೆಯ ಈ ಅವಧಿಯಲ್ಲಿ ಹಗಲುರಾತ್ರಿ ಎನ್ನದೆ ಮೂರು ದಿನ ದೇಶಾದ್ಯಂತ ಪ್ರತಿ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸಲಾಗುತ್ತಿದೆ. ಈ ಅಭಿಯಾನಕ್ಕೆ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದ ಸ್ಪಂದನೆ ದೊರೆಯಬೇಕು ಎಂದರು.
ಅಭಿಯಾನದಲ್ಲಿ ಸಾರ್ವಜನಿಕರು ಕೈಮಗ್ಗ ಅಥವಾ ವಿದ್ಯುತ್ ಮಗ್ಗದಿಂದ ಹತ್ತಿ, ಪಾಲಿಯೆಸ್ಟರ್, ಉಣ್ಣೆ ರೇಷ್ಮೆ ಅಥವಾ ಖಾದಿಯಲ್ಲಿ ತಯಾರಿಸಿರುವ ರಾಷ್ಟ್ರಧ್ವಜವನ್ನು ಬಳಸಬಹುದು. ಅಭಿಯಾನದ ಯಶಸ್ವಿಗೆ ಈಗಾಗಲೇ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ ಎಂದು ಹೇಳಿದರು.
ಸಾಕಷ್ಟು ಪ್ರಮಾಣದಲ್ಲಿ ರಾಷ್ಟ್ರಧ್ವಜ ಸಾರ್ವಜನಿಕರಿಗೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಈಗಾಗಲೇ ಎಲ್ಲ ಗ್ರಾಮ ಪಂಚಾಯತ್‌ಗಳಿಗೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ರಾಷ್ಟ್ರಧ್ವಜ ಪೂರೈಕೆ ಮಾಡಲಾಗಿದೆ. ಧ್ವಜ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಪ್ರತಿಯೊಬ್ಬರೂ ಸ್ವಯಂಪ್ರೇರಣೆಯಿಂದ ಅಭಿಯಾನದಲ್ಲಿ ಭಾಗವಹಿಸಿ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಬೇಕು ಎಂದು ಮನವಿ ಮಾಡಿದರು.