

ಬೆಂಗಳೂರು: ನಟಿ ಹರ್ಷಿಕಾ ಪೂಣಚ್ಚ, ಭುವನ್ ಮೇಲೆ ಹಲ್ಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ನಾಲ್ವರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಆರೋಪಿಗಳಾದ ಪರ್ವೇಜ್ ಅಲಿ ಹೀಮ್, ದನೀಶ್ ಅಲಿ ಪರ್ವೇಜ್, ಅಬ್ದುಲ್ ಗೂರ್‌ಖಾನ್, ಶಾಬಾಜ್ ಖಾನ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ಜಿ. ಉಮಾ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, ಪ್ರಕರಣದ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ, ಈ ಹಂತದಲ್ಲಿ ಆರೋಪಿಗಳಿಗೆ ಜಾಮೀನು ನೀಡಿದರೆ ಅದು ತನಿಖೆಯ ಮೇಲೆ ಪರಿಣಾಮ ಬೀರುತ್ತದೆ ಹಾಗೂ ಸಾಕ್ಷಿಗಳಿಗೂ ತೊಂದರೆ ಆಗಲಿದೆ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿತು.
ಅರ್ಜಿದಾರರ ಪರ ವಕೀಲರು, ಪ್ರಕರಣದಲ್ಲಿ ಅರ್ಜಿದಾರರನ್ನು ಅನಗತ್ಯವಾಗಿ ಸಿಲುಕಿಸಲಾಗಿದೆ. ಹಾಗಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು, ಜಾಮೀನು ನೀಡಿದರೆ ಆರೋಪಿಗಳ ಮುಂದೆ ಹಾಜರಾಗಿ ತನಿಖೆಗೆ ಎಲ್ಲ ಸಹಕಾರ ನೀಡಲಿದ್ದಾರೆ ಎಂದರು.
ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸರ್ಕಾರಿ ವಕೀಲೆ ಕೆ.ಪಿ. ಯಶೋದಾ, ಅರೋಪಿಗಳು ನಟಿ ಹರ್ಷಿಕಾ ಪೂಣಚ್ಚ, ಭುವನ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಹಾಗಾಗಿ ಜಾಮೀನು ನೀಡಬಾರದು ಎಂದು ಕೋರಿದರು.
ಪ್ರಕರಣವೇನು?
ನಟಿ ಹರ್ಷಿಕಾ, ಭುವನ್ ಕಳೆದ ಏ.2ರಂದು ರಾತ್ರಿ ಕಾರಿನಲ್ಲಿ ಪುಲಿಕೇಶಿನಗರದ ರೆಸ್ಟೋರೆಂಟ್‌ಗೆ ಹೋದಾಗ ನಾಲ್ಕು ಯುವಕರು ಅಡ್ಡಗಟ್ಟಿ ಬೆದರಿಕೆ ಹಾಕಿ, ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಬಳಿಕ ಏ.15ರಂದು ಪೂಣಚ್ಚ ನಗರದ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ದೂರು ಸಲ್ಲಿಸಿದ್ದರು.