

ಚಂಡೀಗಢ : ಹರಿಯಾಣ(Haryana)ದ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಗುರುವಾರ(ಅ.17) ಪ್ರಮಾಣ ವಚನ ಸ್ವೀಕರಿಸಿದರು.
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, 90 ವಿಧಾನಸಭಾ ಸ್ಥಾನಗಳ ಪೈಕಿ ಬಿಜೆಪಿ 48 ಸ್ಥಾನಗಳನ್ನು ಗೆದ್ದಿದೆ. ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ನಾಯಬ್ ಸಿಂಗ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತಿತರರು ಉಪಸ್ಥಿತರಿದ್ದರು.
ಮುಖ್ಯಮಂತ್ರಿಯವರ ಜೊತೆಗೆ ಅನಿಲ್ ವಿಜ್, ಕ್ರಿಶನ್ ಲಾಲ್ ಪನ್ವಾರ್, ರಾವ್ ನರಬೀರ್ ಸಿಂಗ್, ಮಹಿಪಾಲ್ ಧಂಡಾ, ವಿಪುಲ್ ಗೋಯೆಲ್, ಅರವಿಂದ್ ಕುಮಾರ್ ಶರ್ಮಾ ಮತ್ತು ಶ್ಯಾಮ್ ಸಿಂಗ್ ರಾಣಾ ಸೇರಿ 14 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸಮಾರಂಭದ ಬಳಿಕ ಪ್ರಧಾನಿ ಮೋದಿ ನೇತೃತ್ವದಲ್ಲಿ ಪಂಚಕುಲದಲ್ಲಿ ಎನ್‌ಡಿಎ ಸಾಮಾನ್ಯ ಸಭೆ ನಡೆಯಿತು.
ಹರಿಯಾಣದ ಜೊತೆಗೆ ಚುನಾವಣೆ ನಡೆದ ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರ ಬುಧವಾರ ಅಧಿಕಾರಕ್ಕೆ ಬಂದಿದೆ. ಶ್ರೀನಗರದ ಶೇರಿ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಜಮ್ಮುವಿನ ಸುರೀಂದರ್ ಚೌಧರಿ ಅವರು ಉಪಮುಖ್ಯಮಂತ್ರಿ ಮತ್ತು ನಾಲ್ವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಮತ್ತಿತರರು ಉಪಸ್ಥಿತರಿದ್ದರು.