ತಾಪಂ, ಜಿಪಂ ಎಲೆಕ್ಷನ್ ನಡೆದಿಲ್ಲವೇ? ಸರ್ಕಾರದ ನಡೆಗೆ ಹೈಕೋರ್ಟ್ ಅಚ್ಚರಿ

highcourt
Published on

ಬೆಂಗಳೂರು: ನಾಲ್ಕು ವರ್ಷಗಳಿಂದ ತಾಪಂ, ಜಿಪಂ ಚುನಾವಣೆ ನಡೆದಿಲ್ಲವೇ? ಎಂದು ಆಶ್ಚರ್ಯ ವ್ಯಕ್ತಪಡಿಸಿದ ಹೈಕೋರ್ಟ್, ಅಧಿಕಾರ ವಿಕೇಂದ್ರೀಕರಣಕ್ಕೆ ಸಂಬಂಧಿಸಿದ ಸಂವಿಧಾನದ 73, 74ನೇ ತಿದ್ದುಪಡಿಯಿಂದ ಕರ್ನಾಟಕಕ್ಕೆ ವಿನಾಯಿತಿ ಇದೆಯೇ ಎಂದು ರಾಜ್ಯ ಸರ್ಕಾರವನ್ನು ಖಾರವಾಗಿ ಪ್ರಶ್ನಿಸಿದೆ.

ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಕ್ಷೇತ್ರ ಮರು ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫಲವಾಗಿರುವ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸುವ ಕುರಿತು ಏಕಸದಸ್ಯ ಪೀಠದ ಆದೇಶ ಪಾಲಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಬಗ್ಗೆ ಪ್ರತ್ಯೇಕ ಅರ್ಜಿಗಳು ಸಲ್ಲಿಕೆಯಾಗಿದ್ದವು.

ಈ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ ಮೊಹಮ್ಮದ್ ತಾಹಿರ್ ವಾದ ಮಂಡಿಸಿ, 2021ರ ಮೇನಿಂದ ಗ್ರಾಪಂ ಮತ್ತು ತಾಪಂಗಳು ಆಡಳಿತಾಧಿಕಾರಿಗಳ ಕೈಯಲ್ಲಿವೆ. ಕಾನೂನಿನ ಪ್ರಕಾರ ಅವಧಿ ಮುಗಿಯುವ 6 ತಿಂಗಳಲ್ಲಿ ಚುನಾವಣೆ ನಡೆಸಬೇಕೆಂಬ ವಿಚಾರವನ್ನು ಗಮನಕ್ಕೆ ತಂದರು. ನಾಲ್ಕು ವರ್ಷಗಳಿಂದ ಚುನಾವಣೆ ನಡೆದಿಲ್ಲವೇ ಎಂದು ಮುಖ್ಯ ನ್ಯಾಯಮೂರ್ತಿಗಳು ಅಚ್ಚರಿ ವ್ಯಕ್ತಪಡಿಸಿದರು. ಅಧಿಕಾರ ವಿಕೇಂದ್ರೀಕರಣದ ಮೂಲಕ ಸ್ಥಳೀಯ ಸಂಸ್ಥೆಗಳಿಗೆ ಸ್ವಾಯತ್ತತೆ, ಅವುಗಳ ಸ್ವತಂತ್ರ ನಿರ್ವಹಣೆಗೆ ಸಹಕಾರ ನೀಡುವ ಉದ್ದೇಶದ ಸಂವಿಧಾನದ 73, 74ನೇ ತಿದ್ದುಪಡಿಯಿಂದ ಕರ್ನಾಟಕಕ್ಕೆ ವಿನಾಯಿತಿ ಇದೆಯೇ ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

ಇದಕ್ಕೆ ಸಮಜಾಯಿಷಿ ನೀಡಿದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ, ಲೋಕಸಭಾ ಚುನಾವಣೆ ಹಾಗೂ ಇನ್ನಿತರ ಕಾರಣಗಳಿಗೆ ವಿಳಂಬವಾಗಿದೆ. ಕ್ಷೇತ್ರ ಮರು ವಿಂಗಡಣೆ ಮುಗಿದಿದೆ. ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಇದಕ್ಕಾಗಿ 4 ವಾರ ಕಾಲಾವಕಾಶಬೇಕು ಎಂದು ಕೋರಿದರು.

ಮೀಸಲಾತಿ ನಿಗದಿ ಆಯೋಗದ ಕೆಲಸವಲ್ಲವೇ?

ಕ್ಷೇತ್ರ ಮರುವಿಂಗಡಣೆ, ಮೀಸಲಾತಿ ನಿಗದಿಪಡಿಸುವುದು ಚುನಾವಣಾ ಆಯೋಗದ ಕೆಲಸವಲ್ಲವೇ ಎಂದು ನ್ಯಾಯಪೀಠ ಪ್ರಶ್ನಿಸಿತು. ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ, ಮೊದಲು ಆ ಆಧಿಕಾರ ಆಯೋಗದ ಬಳಿಯೇ ಇತ್ತು. ಆದರೆ, ರಾಜ್ಯ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದು ಆ ಆಧಿಕಾರವನ್ನು ಆಯೋಗದಿಂದ ವಾಪಸ್ ಪಡೆದುಕೊಂಡಿದೆ. ಸರ್ಕಾರದ ಈ ಕ್ರಮವನ್ನೂ ಆಯೋಗ ನ್ಯಾಯಾಲಯದಲ್ಲಿ ಪ್ರಶ್ನಿಸಿದೆ. 12 ವಾರಗಳಲ್ಲಿ ಕ್ಷೇತ್ರ ಮರು ವಿಂಗಡಣೆ ಮತ್ತು ಮೀಸಲಾತಿ ಅಂತಿಮಗೊಳಿಸಲಾಗುವುದು ಎಂದು ಸರ್ಕಾರ ನ್ಯಾಯಾಲಯಕ್ಕೆ ಭರವಸೆ ನೀಡಿತ್ತು. ಆದರೆ, ವರ್ಷ ಕಳೆದರೂ ಮಾಡಿಲ್ಲ. ಅದಕ್ಕಾಗಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಲಾಗಿದೆ ಎಂದು ತಿಳಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net