

ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಪತ್ನಿ ಚೆನ್ನಮ್ಮ ಅವರೊಂದಿಗೆ ಹೆಲಿಕಾಪ್ಟರ್ನಲ್ಲಿ ಬಂದು ಮತ ಚಲಾಯಿಸಿದ್ದಾರೆ. ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡಲಾಗಿದೆ. ಅಲ್ಲಿಂದ ಪಡುವಲಹಿಪ್ಪೆ ಗ್ರಾಮ ಮತಗಟ್ಟೆ ಸಂಖ್ಯೆ 251ರಲ್ಲಿ ಹಕ್ಕು ಚಲಾವಣೆ ಮಾಡಿದ್ದಾರೆ.
ಮಾಜಿ ಸಚಿವ ಎಚ್.ಡಿ.ರೇವಣ್ಣ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದ್ದಾರೆ. ಪಡುವಲಹಿಪ್ಪೆ ಗ್ರಾಮದ 197 ಮತಕೇಂದ್ರದಲ್ಲಿ ಭವಾನಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಎಂಎಲ್ಸಿ ಸೂರಜ್ ರೇವಣ್ಣ ಮತ ಚಲಾಯಿಸಿದ್ದಾರೆ. ಬರಿಗಾಲಿನಲ್ಲಿ ಆಗಮಿಸಿ ಹಕ್ಕು ಚಲಾಯಿಸುವ ಮೂಲಕ ಎಚ್.ಡಿ.ರೇವಣ್ಣ ಗಮನ ಸೆಳೆದರು.
ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಮತದಾನ ಮಾಡಿದರು. ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಸೊಸೆ ರೇವತಿ ನಿಖಿಲ್ ಜೊತೆ ಎಚ್ಡಿಕೆ ಮತದಾನ ಮಾಡಿದರು. ಕೇತಗಾನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲಾ ಮತಗಟ್ಟೆ ಸಂಖ್ಯೆ 235ರಲ್ಲಿ ಮತ ಚಲಾಯಿಸಿದರು.