ಕಾಂಗ್ರೆಸ್​ ಸರ್ಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ: ಎಚ್​.ಡಿ. ಕುಮಾರಸ್ವಾಮಿ

Untitled design - 2023-08-17T120155.084
Published on

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಸರಣಿ ಟ್ವೀಟ್​ ಮುಖೇನ ಆರೋಪ ಎಸಗಿರುವ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ, ಕಾಂಗ್ರೆಸ್​ ಸರ್ಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ ಎಂದು ಹೇಳಿದ್ದಾರೆ.

"ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿ, ಕನ್ನಡಿಗರ ತಲೆ ಮೇಲೆ ಮಕ್ಮಲ್ ಟೋಪಿ ಇಟ್ಟ ಕಾಂಗ್ರೆಸ್, ಈಗ 'I.N.D.I.A'ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ. ಅಂದುಕೊಂಡಿದ್ದೇ ಆಗಿದ್ದು, ನಮ್ಮ ಭಯ ನಿಜವಾಗಿದೆ. ಕಾಂಗ್ರೆಸ್​

ಸರಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ" ಎಂದು ಹೇಳಿದರು.

"ಮಳೆ ಅಭಾವದಿಂದ ಜಲಾಶಯಗಳು ತುಂಬಿಲ್ಲ. ರೈತರ ಬೆಳೆಗೆ ನೀರಿಲ್ಲ, ಬೆಂಗಳೂರಿಗೆ ಕುಡಿಯುವ ನೀರಿಗೂ ತತ್ವಾರ. ನಮ್ಮ ಹೊಟ್ಟೆಗೇ ಹಿಟ್ಟಿಲ್ಲ, ನೆರೆಮನೆಯವರ ಜುಟ್ಟಿಗೆ ಮಲ್ಲಿಗೆ ಮುಡಿಸಲು ಹೊರಟಿದೆ ಸರಕಾರ. ಕನ್ನಡಿಗರಿಗೆ ವಂಚಿಸಿ ರಾಜಾರೋಷವಾಗಿ ನೀರು ಹರಿಸುವ ಮೂಲಕ ತಮಿಳುನಾಡು ಜತೆ ರಾಜಕೀಯ ಚೌಕಾಬಾರ ಆಡುತ್ತಿದೆ! ಇದೇನು ಇನ್ನೊಂದು ಗ್ಯಾರಂಟಿನಾ?" ಎಂದು ಟ್ವೀಟ್​ನಲ್ಲಿ ಹೇಳಿದರು.

"2024ರ ಲೋಕಸಭೆ ಗೆಲುವಿಗೆ ಕಾವೇರಿ ಹಿತವನ್ನು ನೆರೆರಾಜ್ಯಕ್ಕೆ ಅಡವಿಟ್ಟಿದೆ ಹಸ್ತಪಕ್ಷ ಸರಕಾರ! ತಮಿಳುನಾಡಿಗೆ ಬೆದರಿ ಶರಣಾಗಿದೆ. ಕಾವೇರಿ ಜಲನಿರ್ವಹಣಾ ಪ್ರಾಧಿಕಾರದ ಸಭೆಯಿಂದಲೇ ಹೊರನಡೆದ, ರಾಜ್ಯದ ವಿರುದ್ಧ ಸುಪ್ರೀಂಕೋರ್ಟ್ಗೆ ಅರ್ಜಿ ಹಾಕಿದ ರಾಜ್ಯದೆದುರು ದೈನೇಸಿಯಾಗಿ ಮಂಡಿಯೂರಿದ್ದು, ಕನ್ನಡಿಗರ ಸ್ವಾಭಿಮಾನಕ್ಕೆ ಕೊಟ್ಟ ಕೊಡಲಿಪೆಟ್ಟು" ಎಂದು ಹೇಳಿದರು.

"1962 ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಮಾಜಿ ಪ್ರದಾನಿ ಎಚ್​.ಡಿ. ದೇವೇಗೌಡರು ಅವರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸೆಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂಕೋರ್ಟ್​​ಗೆ ಅರ್ಜಿ ಹಾಕಿದ ಕ್ಷಣ ಬೆದರಿ ಕೈ ಚೆಲ್ಲಿದೆ. ಸಂಕಷ್ಟ ಸ್ಥಿತಿಯ ಬಗ್ಗೆ ಕಾಂಗ್ರೆಸ್​ ಸರಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲಿಲ್ಲ, ಯಾಕೆ? ಕಾನೂನು ತಜ್ಞರ ಜತೆ, ಪ್ರತಿಪಕ್ಷ ಮುಖಂಡರ ಜತೆ ಸಮಾಲೋಚನೆ ನಡೆಸದೇ ವಾಯುವೇಗದಲ್ಲಿ ತಮಿಳುನಾಡಿಗೆ ನೀರು ಹರಿಸಿದ ಒಳಗುಟ್ಟೇನು? ಜನತೆಗೆ ಗೊತ್ತಾಗಬೇಕಿದೆ" ಎಂದು ಟ್ವೀಟ್​ ಮುಖೇನ ಪ್ರಶ್ನಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net