

ಬೆಂಗಳೂರು: ವೈಟ್ನರ್ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ವಿಪಕ್ಷ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿರುಗೇಟು ನೀಡಿದ್ದರು. ಮುಖ್ಯಮಂತ್ರಿಗಳ ಪೋಸ್ಟ್ ಬೆನ್ನಲ್ಲೇ ತಮ್ಮದೊಂದು ಟ್ವೀಟ್ ಹಂಚಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ: ರಸ್ತೆ ಸೌಕರ್ಯಕ್ಕೆ 40 ಕೋಟಿ ರೂ.
"ಇದು ಮೂಲ ದಾಖಲೆ, ಮೂಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು?ಅಸಲಿಗೆ ನಿಮಗೆ ಇದನ್ನು ತಂದು ಕೊಟ್ಟ ಮಹಾಶಯರು ಯಾರು? ಇಷ್ಟಕ್ಕೂ ಈ ದಾಖಲೆ ಮೂಡಾದಲ್ಲಿದೆಯಾ ಅಥವಾ ನಿಮ್ಮ ಮನೆಯಲ್ಲಿದೆಯಾ ಹೇಳಿ. ಇದಕ್ಕೆ ಟಾರ್ಚ್ ಹಾಕಿದವರು ಯಾರು? ನೀವೇನಾ ಅಥವಾ ಇನ್ನಾರಾದರೂ ಇದ್ದಾರಾ" ಎಂದು ಲೇವಡಿ ಮಾಡಿದರು.
"ನನ್ನ ಪ್ರಶ್ನೆ; ಈ ದಾಖಲೆಯನ್ನೇಕೆ ನೀವು ಕೋರ್ಟ್‌ಗೆ ಕೊಟ್ಟಿಲ್ಲ, ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಾ ಹೇಗೆ? ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ? ಶಿಶುಪಾಲನ ಹಾಗೆ, ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ. ಮಾಡಿದ ತಪ್ಪು ಮುಚ್ಚಿಕೊಳ್ಳಲು ಮತ್ತೆ ಮತ್ತೆ ಅದನ್ನೇ ಮಾಡುತ್ತಿರುವಿರಿ" ಎಂದು ಟ್ವೀಟ್ ಮೂಲಕ ಸಿಎಂಗೆ ತಿರುಗೇಟು ನೀಡಿದ್ದಾರೆ.