ನದಿ, ತೊರೆಗಳಲ್ಲಿ ನೀರಿನ ಮಟ್ಟ ಏರಿಕೆ

page 7 2
Published on

ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಎರಡು ದಿನದಿಂದ ಧಾರಾಕಾರ ಮಳೆಯಾಗುತ್ತಿದ್ದು, ಕಾವೇರಿ, ಲಕ್ಷ್ಮಣ ತೀರ್ಥ, ತ್ರಿವೇಣಿ ಸಂಗಮ ಸೇರಿ ನದಿ, ತೊರೆಗಳಲ್ಲಿ ಗಣನೀಯ ಪ್ರಮಾಣದಲ್ಲಿ ನೀರು ಏರಿಕೆ ಕಂಡಿದೆ. ಮಳೆ ಅಬ್ಬರಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿದೆ. ಆ.7ರ ವರೆಗೆ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡಿನಲ್ಲಿ ಮಳೆ ಚುರುಕು: ಮಲೆನಾಡಿನಲ್ಲಿ ಕಳೆದೊಂದು ವಾರದಿಂದ ಸಂಪೂರ್ಣ ಬಿಡುವು ನೀಡಿದ್ದ ಮಳೆ ಸೋಮವಾರ ಮತ್ತೆ ಚುರುಕಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ತಾಲೂಕಿನ ಘಟ್ಟ ಪ್ರದೇಶ, ಮಲೆನಾಡು ಭಾಗ ಹಾಗೂ ಶರಾವತಿ ಕೊಳ್ಳ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಲಿಂಗನಮಕ್ಕಿ ಅಣೆಕಟ್ಟೆಗೆ 11,918 ಕ್ಯೂಸೆಕ್, ಲಕ್ಕವಳ್ಳಿ ಭದ್ರಾ ಡ್ಯಾಂಗೆ 2,683 ಕ್ಯೂಸೆಕ್, ಗಾಜನೂರು ತುಂಗಾ ಜಲಾಶಯಕ್ಕೆ 3,914 ಕ್ಯೂಸೆಕ್ ಒಳಹರಿವಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ವರುಣ ಆರ್ಭಟಿಸುತ್ತಿದ್ದಾನೆ. ಕಳಸ, ಬಾಳೆಹೊನ್ನೂರು, ಮೂಡಿಗೆರೆ, ಶೃಂಗೇರಿ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.

ಕರಾವಳಿಯಲ್ಲಿ ಬಿರುಸು: ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಬಿರುಸಿನ ಮಳೆ ಸುರಿದಿದೆ. ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುರಿಂದ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಕುಮಾರಧಾರಾ ನದಿಯಲ್ಲಿ ಪ್ರವಾಹ ಹೆಚ್ಚಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟ ಮುಳುಗಿದೆ. ಕರಾವಳಿಯಲ್ಲಿ್ಲ ಇನ್ನೂ 5 ದಿನ ಆರೆಂಜ್ ಎಚ್ಚರಿಕೆ ಘೊಷಿಸಲಾಗಿದೆ.

ಆರೆಂಜ್ ಅಲರ್ಟ್: ರಾಜ್ಯದಲ್ಲಿ ಮುಂಗಾರು ಆರ್ಭಟ ಮುಂದುವರಿದಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಮಳೆ ಅರ್ಭಟ ಮತ್ತಷ್ಟು ಜೋರಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಆ.4ರಿಂದ ಆ.8ರವರೆಗೆ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ 4 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net