

ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನ-ಜಾನುವಾರು ಜೀವ ಕಳೆದುಕೊಳ್ಳುವಂತಾಗಿದೆ. ಇದರ ನಡುವೆ ಭಾರತೀಯ ಹವಾಮಾನ ಇಲಾಖೆ ದೇಶದ ಐದು ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಇದು ಜನರಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ.
ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್, ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಿಂದ ಅತಿ ಹೆಚ್ಚು ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.
ಮತ್ತೊಂದೆಡೆ, ಭಾರಿ ಮಳೆಯಿಂದಾಗಿ ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಮಳೆ ಹೆಚ್ಚಾಗಲಿದೆ. ಮುಂದಿನ ದಿನಗಳಲ್ಲಿ ಕೇರಳ, ತಮಿಳುನಾಡು, ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಘೋಷಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಾತ್ರ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರಿ ಮಳೆಯ ನಂತರ ಹಿಮಾಚಲ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಇದರಿಂದ 13 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ವಾರದಿಂದ ಕುಲು, ಮನಾಲಿ ಮತ್ತು ಶಿಮ್ಲಾದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಪ್ರವಾಹಕ್ಕೆ ಕಾರಣವಾಗಿತ್ತು. ಭಾರಿ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದ್ದು, ರಾಜ್ಯಾದ್ಯಂತ 87 ರಸ್ತೆಗಳನ್ನು ಸರ್ಕಾರ ಮುಚ್ಚಿದೆ. ಮತ್ತೊಂದೆಡೆ ಹಿಮಾಚಲದಲ್ಲಿ 40 ಮಂದಿ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಹುಡುಕಾಟ ನಡೆಯುತ್ತಿದೆ.