

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕು ಹಿನ್ನೆಲೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಇದೀಗ ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.
ಕರಾವಳಿ, ದಕ್ಷಿಣ ಒಳನಾಡಿಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಇಂದಿನಿಂದ 4 ದಿನ ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಹೆಚ್ಚಿದೆ. 4 ದಿನಗಳ ಕಾಲ ಕರಾವಳಿ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಕೆಲ ಭಾಗಗಳಿಗೆ ಇಂದಿನಿಂದ 4 ದಿನ ಉಡುಪಿ, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ದಕ್ಷಿಣ ಒಳನಾಡಿನ ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು, ಕೊಡುಗು, ಶಿವಮೊಗ್ಗ ಜಿಲ್ಲೆಗಳಿಗೆ ಇಂದು ಯಲ್ಲೋ ಮತ್ತು ಮುಂದಿನ 3 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿಗೆ ಇಂದು ಕೂಡ ಸಾಧಾರಣ ಮಳೆಯಾಗಲಿದ್ದು, ನಗರದಲ್ಲಿ ಮೋಡ ಕವಿದ ವಾತಾವರಣ ಎಂದಿನಂತೆ ಮುಂದುವರೆಯಲಿದೆ. ಉಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.