

ಬೆಂಗಳೂರು: ಕಳೆದ ವಾರದಿಂದ ಎಡಬಿಡದೇ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕರುನಾಡು ತತ್ತರಿಸಿದ್ದು, ಬೆಳೆದಿದ್ದ ಬೆಳೆಗಳು ಹಾನಿಗೀಡಾಗುವ ಮೂಲಕ ರೈತರನ್ನು ಸಂಕಷ್ಟಕ್ಕೆ ದೂಡಿದೆ. ಈ ನಡುವೆ ಜನ-ಜೀವನದ ಮೇಲೂ ಭಾರೀ ಪರಿಣಾಮ ಬೀರಿದೆ.
ಮಾನ್ಸೂನ್ ಮುನ್ನವೇ ಸುರಿದಿರುವ ಮಳೆಯಿಂದಾದ ಆಗು-ಹೋಗುಗಳ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಶನಿವಾರ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಿದರು.
ಗೃಹ ಕಚೇರಿ ಕೃಷ್ಣಾದಿಂದ ವೀಡಿಯೋ ಕಾನ್ಪೆರೆನ್ಸ್ ಮೂಲಕ ಸಭೆ ನಡೆಸಿದ ಮುಖ್ಯಮಂತ್ರಿಗಳು, ರಾಜ್ಯದ ಮಳೆಯ ಪರಿಸ್ಥಿತಿ ಕುರಿತು ಅವಲೋಕಿಸಲಾಗಿದ್ದು, ಹಾನಿಗೀಡಾದ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಹಾರ ನೀಡುವಂತೆ ಸೂಚಿಸಿದರು.
ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ, ಮಳೆಯಿಂದ ಆಗಿರುವ ಹಾನಿ, ಹಾನಿಗೆ ಕೈಗೊಂಡ ಪರಿಹಾರ ಕಾರ್ಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.
ಅಲ್ಲದೇ ಬೇರೆ ರಾಜ್ಯಗಳಲ್ಲಿ ಸುರಿಯುತ್ತಿರುವ ಮಳೆ, ಮುಂದಿನ ಮುಂಗಾರು ಮಳೆಗೆ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಮಾಲೋಚಿಸಿದ ಮುಖ್ಯಮಂತ್ರಿ ಶೀಘ್ರದಲ್ಲೇ ಸಿದ್ಧತೆ ಕೈಗೊಳ್ಳಬೇಕೆಂದು ಸೂಚಿಸಿದರ.
ಕಂದಾಯ ಸಚಿವ ಆರ್. ಅಶೋಕ್, ವಸತಿ ಸಚಿವ ವಿ. ಸೋಮಣ್ಣ, ಇಂಧನ ಸಚಿವ ಸುನಿಲ್ ಕುಮಾರ್ ಭಾಗಿಯಾಗಿದ್ದರು. (ದಿಗ್ವಿಜಯ ನ್ಯೂಸ್)