

Heavy rain : ಶನಿವಾರ (ಮೇ 24) ಕೇರಳಕ್ಕೆ ಅಪ್ಪಳಿಸಿದ ಮುಂಗಾರು ಮಳೆಯಿಂದಾಗಿ ಅನೇಕ ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ವರುಣ ಅಬ್ಬರ ಜೋರಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಸೋಮವಾರ (ಮೇ 26) ಮುಂಜಾನೆ ಮುಂಬೈನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಎಲ್ಲೆಡೆ ಪ್ರವಾಹ ಪರಿಸ್ಥಿತಿ ತಲೆದೂರಿದೆ. ಸಾರಿಗೆ ಮತ್ತು ವಿಮಾನ ಕಾರ್ಯಾಚರಣೆಯಲ್ಲಿ ಅಡಚಣೆ ಉಂಟಾಗಿದ್ದು, 250ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಮುಂಬೈನ ಕುರ್ಲಾ, ಸಿಯಾನ್, ದಾದರ್ ಮತ್ತು ಪರೇಲ್ ಸೇರಿದಂತೆ ಹಲವಾರು ತಗ್ಗು ಪ್ರದೇಶಗಳು ತೀವ್ರವಾಗಿ ಬಾಧಿತವಾಗಿದ್ದು, ಮುಂಜಾನೆ ಪ್ರವಾಹದಿಂದ ತುಂಬಿದ ರಸ್ತೆಗಳಲ್ಲಿ ವಾಹನಗಳು ಓಡಾಡುತ್ತಿರುವ ದೃಶ್ಯಗಳು ಕಂಡುಬಂದಿವೆ.
ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೆಂಟ್ರಲ್, ವೆಸ್ಟರ್ನ್ ಮತ್ತು ಹಾರ್ಬರ್ ಮೂರು ಪ್ರಮುಖ ಮಾರ್ಗಗಳಲ್ಲಿ ಸ್ಥಳೀಯ ರೈಲು ಸೇವೆಗಳು ವೇಳಾಪಟ್ಟಿಯಲ್ಲಿ ವಿಳಂಬವಾಗುತ್ತಿವೆ. ಮತ್ತೊಂದೆಡೆ, ಹವಾಮಾನ ಇಲಾಖೆಯು ಮಹಾರಾಷ್ಟ್ರದ ಮುಂಬೈ, ಥಾಣೆ ಮತ್ತು ಪಾಲ್ಘರ್ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಿದೆ. ಅತಿ ಹೆಚ್ಚು ಮಳೆಯಾಗುವ ಹಿನ್ನೆಲೆಯಲ್ಲಿ ರಾಯಗಢ, ರತ್ನಗಿರಿ ಮತ್ತು ಮಧುದುರ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಮುಂದಿನ ಮೂರರಿಂದ ನಾಲ್ಕು ಗಂಟೆಗಳಲ್ಲಿ ಮಹಾರಾಷ್ಟ್ರದಾದ್ಯಂತ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಇದೇ ಸಂದರ್ಭದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೋಮವಾರ ಬೆಳಗ್ಗೆ ಬಾರಾಮತಿಯ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ ಎಲ್ಲಾ ಭದ್ರತಾ ಸಂಸ್ಥೆಗಳಿಗೆ ಜಾಗರೂಕರಾಗಿರಲು ಆದೇಶಿಸಿದ್ದಾರೆ. ಇದೇ ವೇಳೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಸಿಬ್ಬಂದಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸುಮಾರು 3,100 ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಮತ್ತೊಂದೆಡೆ, ದೆಹಲಿ ಮತ್ತು ಕರ್ನಾಟಕದಲ್ಲೂ ಭಾರಿ ಮಳೆಯಾಗುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಮಳೆಯಿಂದಾಗಿ ವಿಮಾನ ಕಾರ್ಯಾಚರಣೆಗೆ ತೀವ್ರ ಅಡ್ಡಿ ಉಂಟಾಗಿದೆ. ಸುಮಾರು 49 ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಇವುಗಳಲ್ಲಿ 32 ಪ್ರಾದೇಶಿಕ ಸೇವೆಗಳು ಮತ್ತು 17 ಅಂತರರಾಷ್ಟ್ರೀಯ ಸೇವೆಗಳಾಗಿವೆ. ಇನ್ನು ಕರ್ನಾಟಕದ ಹಲವು ಭಾಗಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. (ಏಜೆನ್ಸೀಸ್)