ಭಾರೀ ಮಳೆ: ನಾಳೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Vijayavani-logo
Published on

ಬೆಂಗಳೂರು: ರಾಜ್ಯದಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಬುಧವಾರದಿಂದ ಇನ್ನೂ ಎರಡು ದಿನ ವರ್ಷಧಾರೆ ಮುಂದುವರಿಯಲಿದೆ. ಜತೆಗೆ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ, ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಗಾಳಿಯ ವೇಗವು 40-50 ಕಿ.ಮೀ. ವೇಗದಲ್ಲಿ ಬೀಸಲಿದ್ದು, ಕೆಲವೆಡೆ ಸಾಧಾರಣ ಪ್ರಮಾಣದ ವರ್ಷಧಾರೆಯಾಗಬಹುದು. ದಕ್ಷಿಣ ಒಳನಾಡಿನ ಇನ್ನುಳಿದ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಬಹುದು. ಆದರೆ, ಗುರುವಾರ ಈ ಪ್ರದೇಶಗಳಲ್ಲಿ ಭಾರೀ ವರ್ಷಧಾರೆಯಾಗುವ ನಿರೀಕ್ಷೆ ಇದೆ. ಆ ಬಳಿಕ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ ಕಡಿಮಯಾಗಲಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮೀನುಗಾರರಿಗೆ ಎಚ್ಚರಿಕೆ:

ರಾಜ್ಯದ ಕರಾವಳಿ ತೀರದುದ್ದಕ್ಕೂ ಪ್ರತೀ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿರುವ ಕಾರಣ ಮೀನುಗಾರರು ಸಮದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಪೂರ್ವ ಮುಂಗಾರು ಆರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಮೀನುಗಾರರನ್ನು ಎಚ್ಚರಿಸಲಾಗಿದೆ.

ವಾರಾಂತ್ಯಕ್ಕೆ ಮಳೆ ಕ್ಷೀಣ?:

ಪ್ರಸ್ತುತ ರಾಜ್ಯದ ವಿವಿಧೆಡೆ ಉತ್ತಮ ಮಳೆಯಾಗುತ್ತಿದೆ. ಆದರೆ, ವಾರಾಂತ್ಯದ ವೇಳೆಗೆ ಮಳೆ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದೆ. ಶುಕ್ರವಾರ ಅಥವಾ ಶನಿವಾರದಿಂದ ವರ್ಷಧಾರೆ ಕಡಿಮೆಯಾಗಲಿದ್ದು, ಒಳನಾಡು ಜಿಲ್ಲೆಗಳಲ್ಲಿ ಹಗುರ ಮಳೆ ಮಾತ್ರ ನಿರೀಕ್ಷಿಸಬಹುದು ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net