

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಎಲ್ಲಾ 31 ಜಿಲ್ಲೆಗಳನ್ನು ಆವರಿಸಿದೆ. ಆಶ್ಲೇಷಾ ಮಳೆ ಬಿರುಸುಗೊಳ್ಳುತ್ತಿದ್ದು ಜಲಾಶಯಗಳಿಗೆ ಹೆಚ್ಚಿನ ನೀರು ಹರಿದುಬರುತ್ತಿದೆ.
ಮಂಗಳವಾರ ಕರಾವಳಿ ಭಾಗದ ಉತ್ತರಕನ್ನಡ, ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಉತ್ತಮ ಮಳೆ ಸುರಿದಿದೆ. ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದ ವರ್ಷಧಾರೆಯಾಗಿದೆ. ಗುರುವಾರದಿಂದ (ಆ.14) ಈ ವಾರಾಂತ್ಯದವರೆಗೂ ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳಲ್ಲೂ ಭಾರಿ ವರ್ಷಧಾರೆ ಆಗಲಿದೆ. ಗುಡುಗು - ಮಿಂಚು ಸಹಿತ ಮಳೆ ಸುರಿಯುವ ಜತೆಗೆ ಗಾಳಿಯ ವೇಗ ಹೆಚ್ಚಿರುತ್ತದೆ. ಕೆಲ ಜಿಲ್ಲೆಗಳಲ್ಲಿ 40-50 ಕಿ.ಮೀ. ರಭಸದಲ್ಲಿ ಬೀಸಲಿದೆ.
ಬುಧವಾರದಿಂದ ನಾಲ್ಕು ದಿನ ಉತ್ತರ ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.
ಗುರುವಾರದಿಂದ ಕರಾವಳಿಯ ಮೂರೂ ಜಿಲ್ಲೆಗಳಿಗೂ ಯೆಲ್ಲೊ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದ್ದು, ಕೆಲವೊಮ್ಮೆ ಸಾಧಾರಣ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.