

ಶಿವಮೊಗ್ಗ: ಭದ್ರಾ ಜಲಾಶಯ ಭರ್ತಿಗೆ ಇನ್ನೂ 19 ಅಡಿ ಬಾಕಿ ಇದೆ. ಭದ್ರಾ ಜಲಾನಯನ ಭಾಗದಲ್ಲಿ ಅಧಿಕ ಮಳೆ ಆಗುತ್ತಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದಿಂದ ನದಿಗೆ ಹೆಚ್ಚುವರಿ ನೀರು ಬಿಡುಗಡೆ ಕುರಿತು ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಒಳಹರಿವಿನ ಪ್ರಮಾಣ ಏರಿಕೆ ಆಗುತ್ತಿರುವುದರಿಂದ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ. ಅಣೆಕಟ್ಟು ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಸ್ಪಿಲ್‌ವೇ ಗೇಟ್ ಮೂಲಕ ನದಿಗೆ ಬಿಡಲಾಗುವುದು. ಹಾಗಾಗಿ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವ ಜನರು ಮುಂಜಾಗ್ರತೆ ದೃಷ್ಟಿಯಿಂದ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಆರ್.ರವಿಚಂದ್ರ ಸೂಚಿಸಿದ್ದಾರೆ.
ಭದ್ರಾ ನದಿಯ ಎಡ ಮತ್ತು ಬಲ ದಂಡೆಯ ಉದ್ದಕ್ಕೂ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕಿದೆ. ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.