ವಾರಾಂತ್ಯದವರೆಗೆ ರಾಜ್ಯದಲ್ಲಿ ಭಾರಿ ಮಳೆ

8-6877ec55ed646
Published on

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ವಾರಾಂತ್ಯದವರೆಗೂ ಭಾರಿ ಮಳೆ ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಹಾಸನ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಪ್ರಮಾಣದ ಮಳೆಯಾಗಲಿದ್ದು, ಉಳಿದ ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಪ್ರಮಾಣದ ವರ್ಷಧಾರೆ ಆಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ದ.ಕ.ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಉತ್ತಮ ಮಳೆಯಾಗಿದ್ದು, ಗುರುವಾರ ಉಡುಪಿ ಜಿಲ್ಲೆ ಹಾಗೂ ದ.ಕ.ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೊಷಿಸಿದೆ.

6 ಜಿಲ್ಲೆಗಳಲ್ಲಿ ಕಟ್ಟೆಚ್ಚರ: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುರುವಾರದಿಂದ ಭಾನುವಾರದವರೆಗೆ ಭಾರಿ ಮಳೆ ಆಗುವುದಾಗಿ ಹವಾಮಾನ ಇಲಾಖೆ ಎಚ್ಚರಿಸಿದ್ದು, ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.

ಒಳನಾಡಲ್ಲಿ ಮಳೆ ಕೊರತೆ: ಈ ಬಾರಿಯ ಮುಂಗಾರು ಆರಂಭವಾದಾಗಿನಿಂದ ಜೂ.1ರಿಂದ ಈವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಸರಾಸರಿ ಶೇ.5 ಹೆಚ್ಚು ಪ್ರಮಾಣದಲ್ಲಿ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಶೇ.13, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಶೇ.7 ಅಧಿಕ ವರ್ಷಧಾರೆ ಆಗಿದೆ. ಆದರೆ, ಬೆಳಗಾವಿ ಹಾಗೂ ಧಾರವಾಡ ಹೊರತುಪಡಿಸಿದರೆ ಉಳಿದ ಜಿಲ್ಲೆಗಳಲ್ಲಿ ಕೊರತೆ ಉಂಟಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಶೇ.4 ಮಳೆ ಕೊರತೆಯಾಗಿದೆ.

ಬೆಳಗಾವೀಲಿ ತಗ್ಗಿದ ಮಳೆ

ಬುಧವಾರ ಬೆಳಗಾವಿ ನಗರದಲ್ಲಿ ಮಳೆ ಬಿಡುವು ಕೊಟ್ಟಿದೆ. ಆದರೆ, ಪಶ್ಚಿಮಘಟ್ಟ ಪ್ರದೇಶದಲ್ಲಿ ಉತ್ತಮ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಅಪಾರ ಪ್ರಮಾಣದ ನೀರು ನದಿಗೆ ಹರಿದು ಬರುತ್ತಿರುವುದರಿಂದ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದಿಂದ ನೀರು ಹೊರಬಿಡಲಾಗಿದೆ. 51 ಟಿಎಂಸಿ ಸಾಮರ್ಥ್ಯದ ಹಿಡಕಲ್ ಜಲಾಶಯ ದಲ್ಲಿ 43 ಟಿಎಂಸಿ ನೀರು ಸಂಗ್ರಹ ಆಗಿದ್ದು, ಬುಧವಾರ 5,734 ಕ್ಯೂಸೆಕ್ ನೀರು ಬಿಡಲಾಗಿದೆ. ಜಲಾಶಯಕ್ಕೆ 16,321 ಕ್ಯೂಸೆಕ್ ನೀರಿನ ಒಳಹರಿವಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಮಳೆ ಮುಂದುವರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net