Karnataka Weather : ನೈಋತ್ಯ ಮಾನ್ಸೂನ್ ಮತ್ತೆ ಚುರುಕು ಪಡೆದುಕೊಂಡಿದ್ದು, ಕರ್ನಾಟಕದಾದ್ಯಂತ ಜುಲೈ 16ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿಯೂ ರಣಭೀಕರ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬೀದರ್, ಧಾರವಾಡ, ಕಲಬುರಗಿ ಹಾಗೂ ಗದಗ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ಹಾವೇರಿ, ಬಾಗಲಕೋಟೆ, ರಾಯಚೂರು, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಎಚ್ಎಎಲ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇದೆ.