ಆರು ತಿಂಗಳಲ್ಲಿ ನಗರದೆಲ್ಲೆಡೆ ಮರ ಪ್ರಾಧಿಕಾರ ರಚನೆ ಮಾಡಬೇಕು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೆಶನ

highcourt
Published on

ಬೆಂಗಳೂರು:  ರಾಜ್ಯದ ಎ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆರು ತಿಂಗಳಲ್ಲಿ ಮರ ಪ್ರಾಧಿಕಾರವನ್ನು ರಚನೆ ಮಾಡಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶಿಸಿದೆ.

ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಮರ ಪ್ರಾಧಿಕಾರ ರಚನೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಅರಣ್ಯ ಪರಿಸರ ಮತ್ತು ಹವಾಮಾನ ಬದಲಾವಣೆ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಯೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಸರ್ಕಾರಿ ಪರ ವಕೀಲರು ಸಲ್ಲಿಸಿದ ಮೆಮೊ ಅನ್ವಯ 2018ರ ಜ.12ರಂದು ಉತ್ತರ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಶಿವಮೊಗ್ಗ, ಉಡುಪಿ, ಬೆಳಗಾವಿ ಮತ್ತು ಮಂಗಳೂರು ಜಿಲ್ಲೆಗಳಲ್ಲಿ ಮರ ಪ್ರಾಧಿಕಾರ ರಚಿಸಿ, ಅವುಗಳಿಗೆ ಮುಖ್ಯಸ್ಥರು ಹಾಗೂ ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿತ್ತು. ಅದರ ಹೊರತಾಗಿ ಯಾವ ಯಾವ ಸ್ಥಳೀಯ ಸಂಸ್ಥೆಯಲ್ಲಿ ಮರ ಪ್ರಾಧಿಕಾರ ರಚನೆ ಮಾಡಿಲ್ಲವೋ, ಅಲ್ಲಿ ಮುಂದಿನ ಆರು ತಿಂಗಳ ಒಳಗೆ ಮರ ಪ್ರಾಧಿಕಾರವನ್ನು ರಚಿಸಬೇಕು.

ಅವುಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಬೇಕು. ನೇಮಕಗೊಂಡ ಮರಗಳ ಪ್ರಾಧಿಕಾರದ ಮುಖ್ಯಸ್ಥರು ಹಾಗೂ ಸದಸ್ಯರು ತಮ್ಮ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಆದೇಶದಲ್ಲಿ ನ್ಯಾಯಪೀಠ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net