

ಬೆಂಗಳೂರು: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಮ್ಮ ಓಡೆತನದ ವಾಣಿಜ್ಯ ಸಂಕೀರ್ಣದಲ್ಲಿ ಅಗ್ನಿ ಸುರಕ್ಷತಾ ನಿಯಮಗಳನ್ನು ಉಲ್ಲಂಸಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಹೂಡಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಪ್ರಕರಣ ರದ್ದು ಕೋರಿ ಬಿ.ಎಸ್.ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶವನ್ನು ನೀಡಿದೆ.
ವಾದ-ಪ್ರತಿವಾದ ಆಲಿಸಿ, ದಾಖಲೆಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಾಲಯ 2018ರ ಜ.31ರ ನಂತರ ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿರುವ ಬಗ್ಗೆ ಯಾವುದೇ ದಾಖಲೆಗಳಿಲ್ಲ. ಆದರೆ 2017 ಮತ್ತು 2018ರಲ್ಲಿ ಪರಿಶೀಲನೆ ನಡೆಸಲಾಗಿದೆ. ಸಿಆರ್‌ಪಿಸಿ ಸೆಕ್ಷನ್ 468ರ ಪ್ರಕಾರ ಘಟನೆ ನಡೆದ ಬಗ್ಗೆ ಪರಿಶೀಲಿಸಿದ ಆರು ತಿಂಗಳಲ್ಲಿ ದೂರು ದಾಖಲಿಸಬೇಕಿತ್ತು. ಆದರೆ ಈ ಪ್ರಕರಣದಲ್ಲಿ 13 ತಿಂಗಳ ನಂತರ 2019ರಲ್ಲಿ ದೂರು ದಾಖಲಿಸಲಾಗಿದೆ. ಆದೊಂದೇ ಕಾರಣದ ಮೇಲೆ ಅರ್ಜಿಯನ್ನು ಮಾನ್ಯ ಮಾಡಲಾಗುತ್ತಿದೆ ಎಂದು ಹೇಳಿದೆ.
ಅಲ್ಲದೆ, ಸುಪ್ರೀಂಕೋರ್ಟ್‌ನ ತೀರ್ಪುಗಳ ಪ್ರಕಾರ ದೂರು ದಾಖಲಿಸಿದ ದಿನದಿಂದ ಲಿಮಿಟೇಷನ್ ಅವಧಿ ಪರಿಗಣಿಸಲಾಗುತ್ತದೆಯೇ ಹೊರತು, ವಿಚಾರಣಾ ನ್ಯಾಯಾಲಯ ಕಾಗ್ನಿಜೆನ್ಸ್ ತೆಗೆದುಕೊಂಡ ದಿನಾಂಕದಿಂದ ಅಲ್ಲ. ಹಾಗಾಗಿ ಪ್ರಕರಣವನ್ನು ರದ್ದುಗೊಳಿಸಲಾಗುತ್ತಿದೆ ಎಂದು ನ್ಯಾಯಪೀಠ ಹೇಳಿದೆ.