ಬೆಂಗಳೂರು: ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಶೀಘ್ರವೇ ಅಧ್ಯಕ್ಷರನ್ನು ನೇಮಕ ಮಾಡುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಕಳೆದ ಎರಡೂವರೆ ವರ್ಷಗಳಿಂದ ಅಧ್ಯಕ್ಷರನ್ನು ನೇಮಕ ಮಾಡದ ಕ್ರಮವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ವಿಭಾಗೀಯ ಪೀಠ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, 2002ರ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಡಿ ಆಯೋಗ ರಚಿಸಲಾಗಿದ್ದು, ಅದಕ್ಕೆ ಎರಡೂವರೆ ವರ್ಷಗಳಿಂದ ಅಧ್ಯಕ್ಷರ ನೇಮಕವಾಗಿಲ್ಲ. ಜತೆಗೆ ಲಕ್ಷಕ್ಕೂ ಅಧಿಕ ಪ್ರಕರಣಗಳು ವಿಲೇವಾರಿಯಾಗದೆ ಬಾಕಿ ಉಳಿದಿದೆ. ಇದರಿಂದಾಗಿ ಅಮಾಯಕ ಜನರು ಸಮಸ್ಯೆ ಅನುಭವಿಸುವಂತಾಗಿದೆ ಎಂದರು. ಹೀಗಾಗಿ, ತುರ್ತಾಗಿ ಅಧ್ಯಕ್ಷರ ನೇಮಕ ಮಾಡಬೇಕು ಎಂದು ಕೋರಿದರು.